ನಬಾರ್ಡ್-ಆರ್‌ಬಿಐ ನಿರ್ಧಾರಗಳಿಂದ ಸಹಕಾರಿ ಕ್ಷೇತ್ರಕ್ಕೆ ತೊಡಕು: ಕೆ.ಎನ್.ರಾಜಣ್ಣ

ಮಂಗಳೂರು, ಮಾ.19: ನಬಾರ್ಡ್ ಮತ್ತು ಆರ್‌ಬಿಐನ ಕಠಿಣ ನಿರ್ಧಾರಗಳು ಸಹಕಾರಿ ಕ್ಷೇತ್ರಕ್ಕೆ ತೊಡಕಾಗಿ ಪರಿಣಮಿಸಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಕೆ.ಎನ್.ರಾಜಣ್ಣ ಆತಂಕ ವ್ಯಕ್ತಪಡಿಸಿ ದ್ದಾರೆ.
ಅವರು ಇಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಅಪೆಕ್ಸ್ ಬ್ಯಾಂಕ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ದ.ಕ. ಜಿಲ್ಲಾ ಸಹಕಾರ ಯೂನಿಯನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಉತ್ಕೃಷ್ಟ ಸಹಕಾರಿ ಸೌಧದ ಶಿವರಾವ್ ಸ್ಮಾರಕ ಸಭಾಭವನದಲ್ಲಿ ಮೈಸೂರು ವಿಭಾಗದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳ ಅಧ್ಯಕ್ಷರು, ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಉಪ ಪ್ರಧಾನ ವ್ಯವಸ್ಥಾಪಕರಿಗೆ ಆಯೋಜಿಸಿದ್ದ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾ ಡುತ್ತಿದ್ದರು.
ಮುಖ್ಯ ಅತಿಥಿಯಾಗಿದ್ದ ಸಹಕಾರ ಮಹಾ ಮಂಡಳದ ನಿರ್ದೇಶಕ ಎಸ್.ಎಲ್. ಭೋಜೇಗೌಡ ಮಾತನಾಡಿ, ಸಹಕಾರಿ ರಂಗದ ಮೇಲೆ ರಾಜಕಾರಣಿಗಳ ಹಸ್ತಕ್ಷೇಪ ಎಲ್ಲಿಯ ವರೆಗೆ ನಿಲ್ಲುವುದಿಲ್ಲವೊ ಅಲ್ಲಿಯವರೆಗೆ ಈ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಯಾಗದು ಎಂದರು.
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಸಹಕಾರ ಮಹಾಮಂಡಳದ ಅಧ್ಯಕ್ಷ ಶೇಖರ ಗೌಡ ಮಾಲಿ ಪಾಟೀಲ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.
ದ.ಕ. ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಹರೀಶ್ ಆಚಾರ್, ಉಡುಪಿ ಯೂನಿ ಯನ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಸಹ ಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ ಅತಿಥಿಗಳಾಗಿದ್ದರು.
ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎ.ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.







