ವೈದ್ಯೆ ವಿರುದ್ಧ ಕ್ರಮ: ಶರಣಪ್ರಕಾಶ್ ಪಾಟೀಲ್
ಗಾಯಾಳುವಿಗೆ ಚಿಕಿತ್ಸೆ ನೀಡಲು ವಿಕ್ಟೋರಿಯಾ ಆಸ್ಪತ್ರೆ ನಿರಾಕರಣೆ

ಬೆಂಗಳೂರು, ಮಾ.20: ಅಪಘಾತದಲ್ಲಿ ಗಾಯ ಗೊಂಡ ವ್ಯಕ್ತಿಗೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದರಿಂದ ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಗೊಂಡಿರುವ ವ್ಯಕ್ತಿಯನ್ನು ಮಾಲೂರು ನಿವಾಸಿ ಕಿಶೋರ್ ಎಂದು ಗುರುತಿಸಲಾಗಿದೆ. ಕಿಶೋರ್ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು, ಮಾ.19ರ ತಡರಾತ್ರಿ ಅರೇಹಳ್ಳಿಯಲ್ಲಿ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಗಾಯಗೊಂಡ ಚಾಲಕನನ್ನು ಚಿಕಿತ್ಸೆಗಾಗಿ ಪೊಲೀಸ್ ಮುಖ್ಯ ಪೇದೆ ಕಲೀಮುಲ್ಲಾ ಎಂಬುವರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲು ಹೋಗಿದ್ದಾರೆ. ಆದರೆ, ಅಲ್ಲಿಯ ವೈದ್ಯೆ ವೈದೇಹಿ ಎಂಬವರು ಕಿಶೋರ್‌ನಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ, ತಕ್ಷಣ ನಿಮ್ಹಾನ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ಗಾಯಗೊಂಡ ಕಿಶೋರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವ ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಗಾಯಗೊಂಡಿರುವ ಕಿಶೋರ್‌ನನ್ನು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಆ ವೈದ್ಯರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.





