ಕೇರಳ ಚುನಾವಣೆ: ಶ್ರೀಶಾಂತ್ ಕಣಕ್ಕಿಳಿಸಲು ಬಿಜೆಪಿ ಯೋಜನೆ
ಕೊಚ್ಚಿ, ಮಾ.22: ಮೇ 16ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕ್ರಿಕೆಟಿಗ ಎಸ್.ಶ್ರೀಶಾಂತ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಿಜೆಪಿಯು ಯೋಜಿಸುತ್ತಿದೆ.
ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಬುಧವಾರ ನಿರ್ಧಾರವೊಂದನ್ನು ಕೈಗೊಳ್ಳುವುದಾಗಿ ಶ್ರೀಶಾಂತ್ ಸುದ್ದಿಸಂಸ್ಥೆಗೆ ತಿಳಿಸಿದರಾದರೂ ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದರು.
ಎರ್ನಾಕುಳಂ ಜಿಲ್ಲೆಯ ತ್ರಿಪ್ಪುನಿತುರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ದಿಲ್ಲಿಯಿಂದ ಹಿರಿಯ ಬಿಜೆಪಿ ನಾಯಕರೋರ್ವರು ಶ್ರೀಶಾಂತ್‌ಗೆ ದೂರವಾಣಿ ಕರೆ ಮಾಡಿ ಕೋರಿಕೊಂಡಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದರು. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಕೇರಳ ಪ್ರವಾಸದ ಸಂದರ್ಭದಲ್ಲಿ ಶ್ರೀಶಾಂತ್ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದೂ ಅವರು ಹೇಳಿದರು.
ರಾಜ್ಯ ನಾಯಕತ್ವಕ್ಕೆ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ, ಆದರೆ ಇನ್ನೆರಡು ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಕೇರಳ ಬಿಜೆಪಿ ಅಧ್ಯಕ್ಷ ಕುಮ್ಮನಂ ರಾಜಶೇಖರನ್ ತನ್ನನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ತಿಳಿಸಿದರು. ಚುನಾವಣಾ ಕಣಕ್ಕಿಳಿಯಲು ಶ್ರೀಶಾಂತ್ ನಿರ್ಧರಿಸಿದರೆ ಅವರು ತ್ರಿಪ್ಪುನಿತುರಾ ಕ್ಷೇತ್ರದಿಂದ 1991ರಿಂದ ಸತತವಾಗಿ ಆಯ್ಕೆಯಾಗುತ್ತಿರುವ ರಾಜ್ಯ ಅಬಕಾರಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಕೆ.ಬಾಬು ವಿರುದ್ಧ ಸ್ಪರ್ಧಿಸುವ ಸಾಧ್ಯತೆಗಳಿವೆ.
2013ರ ಐಪಿಎಲ್ ಫಿಕ್ಸಿಂಗ್ ಪ್ರಕರಣದಲ್ಲಿ ದೋಷಮುಕ್ತಗೊಂಡ ನಂತರ ಶ್ರೀಶಾಂತ್ ಈಗ ಬಿಡುವಿಲ್ಲದ ನಟರಾಗಿದ್ದಾರೆ.





