‘ಕಳವು ಪ್ರಕರಣ ಪತ್ತೆ ಹಚ್ಚಲು ಕಟ್ಟುನಿಟ್ಟಿನ ಕ್ರಮ’
ಬೆಂಗಳೂರು, ಮಾ. 22: ನಗರದ ಸಿಟಿ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಳವು ಪ್ರಕರಣಗಳನ್ನು ಪತ್ತೆಹಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರೈಲ್ವೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.
ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ರವಿಸುಬ್ರಹ್ಮಣ್ಯ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ರೈಲ್ವೆ ಪೊಲೀಸ್ ವಿಭಾಗ ತಮ್ಮ ವ್ಯಾಪ್ತಿಗೆ ಬರುವುದಿಲ್ಲ. ಆದರೂ, ಈ ಕುರಿತಂತೆ ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚಿಸಿ ಕಳವು ಪ್ರಕರಣಗಳ ತಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಭ್ರದತೆ ದೃಷ್ಟಿಯಿಂದ ನಗರ ಸಿಟಿ ರೈಲ್ವೆ ನಿಲ್ದಾಣದಲ್ಲಿ ಸಿಸಿಟಿವಿ ಅಳವಡಿಸಲು ಸೂಚನೆ ನೀಡಲಾಗುವುದು. ರೈಲ್ವೆ ನಿಲ್ದಾಣದಲ್ಲಿ ಕಳವು ಪ್ರಕರಣಗಳು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಅವರು, ರೈಲ್ವೆ ನಿಲ್ದಾಣದ ಸಿಸಿಟಿವಿ ಆಧರಿಸಿ ಕಳವು ಪ್ರಕರಣಗಳನ್ನು ಪತ್ತೆ ಮಾಡಲಾಗುವುದು ಎಂದರು.
ಸಿಟಿ ರೈಲ್ವೆ ನಿಲ್ದಾಣದಲ್ಲಿನ ಕಳವು ಪ್ರಕರಣಗಳನ್ನು ‘ನಾಪತ್ತೆ ಪ್ರಕರಣ’ ಎಂದು ತಪ್ಪಾಗಿ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ಪ್ರಕರಣ ದಾಖಲಿಸುವಲ್ಲಿ ಕರ್ತವ್ಯ ಲೋಪ ಕಂಡು ಬಂದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.





