‘ಕಳಸಾ-ಬಂಡೂರಿ’ ಎ.2ಕ್ಕೆ ಸರ್ವಪಕ್ಷ ಸಭೆ
ಬೆಂಗಳೂರು, ಮಾ. 24: ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷೆಯ ‘ಕಳಸಾ-ಬಂಡೂರಿ’ ಯೋಜನೆ ಜಾರಿ ಸಂಬಂಧ ಪರಿಹಾರ ಕಂಡುಕೊಳ್ಳಲು ಎ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ.
ಎ.2ರ ಬೆಳಗ್ಗೆ 11ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಮುಖಂಡರು, ಉಭಯ ಸದನಗಳ ವಿಪಕ್ಷ ನಾಯಕರು, ರೈತರ ಮುಖಂಡರು ಸೇರಿದಂತೆ ಆ ಭಾಗದ ಜನಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಕಳಸಾ-ಬಂಡೂರಿ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಆ ಭಾಗದ ರೈತರು ಹೋರಾಟ ನಡೆಸುತ್ತಿದ್ದು, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿ ಆವರಿಸಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಮಹಾರಾಷ್ಟ್ರ ಹಾಗೂ ಗೋವಾ ಮುಖ್ಯಮಂತ್ರಿಗಳೊಂದಿಗೆ ರಾಜ್ಯದ ನಿಯೋಗ ತೆರಳಿ ಚರ್ಚಿಸಿ ನ್ಯಾಯಾಧಿಕರಣದ ಹೊರಗೆ ಸಮಸ್ಯೆಯನ್ನು ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಲು ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.





