ಮಾ.31ರಂದು ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರು ಪರೀಕ್ಷೆ

ಬೆಂಗಳೂರು, ಮಾ.24: ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರದ ಹೊಸ ಪಠ್ಯಕ್ರಮದ ಮರು ಪರೀಕ್ಷೆಯನ್ನು ಮಾ.31ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.
ಮರುಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ಸಂಬಂಧ ಗುರುವಾರ ವಿಧಾನಸೌಧದಲ್ಲಿ ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಅಧ್ಯಕ್ಷತೆಯಲ್ಲಿ ನಡೆದ ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಸದಸ್ಯರ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾ.21ರಂದು ನಡೆದಿದ್ದ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸಂಬಂಧ ಇಂದಿನ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಾ.31ರಂದು ಪರೀಕ್ಷೆ ನಡೆಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಮರುಪರೀಕ್ಷೆಯ ಹೊರೆಯಿಂದಾದ ಅನನುಕೂಲಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಕ್ಷಮೆ ಕೋರುತ್ತೇನೆ ಎಂದು ಸಚಿವ ಕಿಮ್ಮನೆ ರತ್ನಾಕರ್ ನುಡಿದರು. ಸಭೆಯಲ್ಲಿ ವಿಧಾನಪರಿಷತ್ ಸಭಾನಾಯಕ ಎಸ್.ಆರ್.ಪಾಟೀಲ್, ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಹಲವು ಸದಸ್ಯರು ಉಪಸ್ಥಿತರಿದ್ದರು.
ಸಿಐಡಿ ತನಿಖೆ ಚುರುಕು
ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ತಂಡ, ಗುರುವಾರ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.







