ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರ ಖಚಿತ ಸುಳಿವು ಸಿಐಡಿಗೆ ದೊರೆತಿದೆ - ಸಿದ್ದರಾಮಯ್ಯ

ಬೆಂಗಳೂರು, ಏ.2:ರಾಜ್ಯಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿರುವ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರ ಖಚಿತ ಸುಳಿವು ಸಿಐಡಿಗೆ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಆರೋಪಿಗಳ ಖಚಿತ ಸುಳಿವು ಆಧರಿಸಿ ಸಿಐಡಿ ಅಧಿಕಾರಿಗಳು ಆರೋಪಿಗಳ ಪತ್ತೆ ಕಾರ್ಯಕೈಗೊಂಡಿದ್ದಾರೆ ತನಿಖೆಯನ್ನು ಮುಕ್ತವಾಗಿ ನಡೆಸಲು ಸಿಐಡಿ ಅಧಿಕಾರಿಗಳಿಗೆ ಎಲ್ಲ ರೀತಿಯ ಸಹಕಾರ ನೀಡಲಾಗಿದೆ ಎಂದು ಹೇಳಿದರು.
ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ನಡೆದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳು ಸಮಾರಂಭದ ವೇದಿಕೆಯಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆಯ ಪ್ರಕರಣದ ಸಂಬಂಧ ಸಿಐಡಿ ಪೊಲೀಸ್ ಮಹಾ ನಿರ್ದೇಶಕ ಕಿಶೋರ್ ಚಂದ್ರ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರತಾಪ್ ರೆಡ್ಡಿ, ಡಿಐಜಿ ಸೋನಿಯಾನಾರಂಗ್ ಅವರೊಂದಿಗೆ ಚರ್ಚೆ ನಡೆಸಿ, ತನಿಖೆ ಮಾಹಿತಿಯನ್ನು ಪಡೆದುಕೊಂಡರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಪ್ರಕರಣವು ತನಿಖೆಯ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡುವುದು ಸಾಧ್ಯವಿಲ್ಲ ಎಂದರು.
ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಅಧಿಕಾರಿಗಳಿರಲಿ, ರಾಜಕಾರಣಿಗಳಿರಲಿ, ಇನ್ಯಾರೇ ಪ್ರಭಾವಿ ಆಗಿರಲಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.







