ಪ್ರತಿಭಟನೆ ಕೈಬಿಡಲು ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಮನವಿ
ಬೆಂಗಳೂರು, ಎ. 2: ಕೃಷಿ ಇಲಾಖೆಯಲ್ಲಿ ಕೃಷಿ ಪದವೀಧರರನ್ನು ನೇಮಕ ಮಾಡಬೇಕು ಹಾಗೂ ಕೃಷಿ ಶಿಕ್ಷಣವನ್ನು ಖಾಸಗೀಕರಣಗೊಳಿಸಬಾರದು ಎಂದು ಮಾ.30ರಿಂದ ನಡೆಸುತ್ತಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಕೃಷಿ ಸಚಿವ ಕಷ್ಣ ಬೈರೇಗೌಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯಗಳ ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳು ಸಲ್ಲಿಸಿರುವ ಬೇಡಿಕೆಗಳ ಮನವಿ ಪತ್ರವನ್ನು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳು ಈಗಾಗಲೇ ಸರಕಾರಕ್ಕೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮನವಿ ಪತ್ರದಲ್ಲಿ ಪ್ರಸ್ತಾಪಿಸಿರುವ ಬೇಡಿಕೆಗಳನ್ನು ರಾಜ್ಯ ಸರಕಾರವು ಸಹಾನುಭೂತಿಯಿಂದ ಪರಿಶೀಲಿಸಲಿದೆ. ಆದಕಾರಣ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಈ ಕೂಡಲೇ ಕೈ ಬಿಡಬೇಕು ಎಂದು ಕಷ್ಣ ಬೈರೇಗೌಡ ವಿದ್ಯಾರ್ಥಿಗಳಲ್ಲಿ ವಿನಂತಿಸಿದ್ದಾರೆ.
ವಿದ್ಯಾರ್ಥಿಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಮುಖಂಡರು ಹಾಗೂ ಸಂಬಂಧಪಟ್ಟ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾನಿಲಯದ ಕುಲಪತಿಗಳನ್ನು ಸದ್ಯದಲ್ಲಿಯೇ ಮಾತುಕತೆಗೆ ಆಹ್ವಾನಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





