ಆಶ್ರಯ ಯೋಜನೆಯಡಿ ನಿವೇಶನ ನೀಡಲು ಒತ್ತಾಯ
ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ

ಶಿವಮೊಗ್ಗ,ಎ.6: ನಗರದ ಬಿ.ಎಚ್.ರಸ್ತೆಯ ಡಬ್ಬಲ್ ರೋಡ್‌ನಲ್ಲಿ ಬುಧವಾರ ಬೆಳಗ್ಗೆ ಹಮಾಲಿ ಕಾರ್ಮಿಕರ ಸಂಘಟನೆಯು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಹಿರಿಯ ಮುಖಂಡರಿಗೆ ಸನ್ಮಾನ ಸಮಾರಂಭ ಆಯೋಜಿಸಿತ್ತು. ಹಾಗೆಯೇ ಆಶ್ರಯ ಯೋಜನೆಯಡಿ ವಸತಿ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘಟನೆಯು ಮುಖಂಡರಿಗೆ ಮನವಿ ಪತ್ರ ಅರ್ಪಿಸಿತು. ಶಾಸಕ ಕೆ.ಬಿ.ಪ್ರಸನ್ನಕುಮಾರ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧ್ದಿ ಪ್ರಾಧಿಕಾರದ ಅಧ್ಯಕ್ಷ ಎನ್.ರಮೇಶ್, ಮಹಾನಗರ ಪಾಲಿಕೆ ಮೇಯರ್ ಎಸ್.ಕೆ.ಮರಿಯಪ್ಪ, ರಾಜ್ಯ ಕಾಂಗ್ರೆಸ್ ಸೇವಾದಳ ಸಮನ್ವಯ ಸಮಿತಿಯ ಸದಸ್ಯ ವೈ.ಎಚ್.ನಾಗರಾಜ್ ಸೇರಿದಂತೆ ಹಲವು ಮುಖಂಡರಿಗೆ ಸಂಘಟನೆಯಿಂದ ಸನ್ಮಾನಿಸಲಾಯಿತು. ಮನವಿ: ಕಳೆದ ಹಲವು ವರ್ಷಗಳಿಂದ ಹಮಾಲಿ ಕಾರ್ಮಿಕರು ಆಶ್ರಯ ಯೋಜನೆಯಡಿ ವಸತಿ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿಕೊಂಡು ಬರುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಿಲ್ಲ. ಪ್ರಸ್ತುತ ಮಹಾನಗರ ಪಾಲಿಕೆಯ ವತಿಯಿಂದ ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಮಾಡಲಾಗುತ್ತಿದ್ದು, ಇದರಲ್ಲಿ ಆದ್ಯತೆಯ ಮೇರೆಗೆ ಹಮಾಲಿ ಕಾರ್ಮಿಕರಿಗೆ ವಸತಿ ಕಲ್ಪಿಸಬೇ
ು ಎಂದು ಸಂಘಟನೆಯು ಮನವಿ ಪತ್ರದಲ್ಲಿ ಆಗ್ರಹಿಸಿದೆ. ಬಡತನದಲ್ಲಿ ಜೀವನ ಸಾಗಿಸುತ್ತಿರುವ ಹಲವು ಹಮಾಲಿ ಕಾರ್ಮಿಕರು ಸ್ವಂತ ಸೂರಿಲ್ಲದೆ ಪರದಾಡುತ್ತಿದ್ದಾರೆ. ಪ್ರಸ್ತುತ ನಗರ ವ್ಯಾಪ್ತಿಯಲ್ಲಿ ನಿವೇಶನಗಳ ಬೆಲೆ ಗಗನಕ್ಕೇರಿದೆ. ಇಂತಹ ಸನ್ನಿವೇಶದಲ್ಲಿ ನಿವೇಶನ ಖರೀದಿಸಿ ಮನೆ ನಿರ್ಮಾಣ ಮಾಡುವುದು ಕನಸಿನ ಮಾತಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರದ ವಿವಿಧ ವಸತಿ ಯೋಜನೆಗಳ ಸೌಲಭ್ಯವನ್ನು ಹಮಾಲಿ ಕಾರ್ಮಿಕರಿಗೆ ಕಲ್ಪಿಸಬೇಕು ಎಂದು ಸಂಘಟನೆ ಮನವಿ ಮಾಡಿದೆ. ಅಗತ್ಯ ಕ್ರಮ: ಸನ್ಮಾನ ಹಾಗೂ ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಹಮಾಲಿ ಕಾರ್ಮಿಕರ ಶ್ರೇಯೋಭಿವೃದ್ಧ್ದಿಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿ ಆಶ್ರಯ ಯೋಜನೆಯಡಿ ವಸತಿ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.







