ಅಂಬೇಡ್ಕರ್ ಜಯಂತಿಯಂದು ಬಿಎಸ್‌ವೈ ಅಧಿಕಾರ ಸ್ವೀಕಾರ

ಬೆಂಗಳೂರು, ಎ.9: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎ.14ರಂದು (ಅಂಬೇಡ್ಕರ್ ಜಯಂತಿ) ಬೆಳಗ್ಗೆ 11:30ಕ್ಕೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ‘ಜಗನ್ನಾಥ ಭವನ’ದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಾಲ್ಕನೆ ಬಾರಿ ಅಧಿಕಾರ ಸ್ವೀಕರಿಸಲಿದ್ದಾರೆ.
ದಕ್ಷಿಣ ಭಾರತದಲ್ಲಿ 2008ರಲ್ಲಿ ಮೊತ್ತಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಹೆಗ್ಗಳಿಕೆ ಹೊಂದಿರುವ ಯಡಿಯೂರಪ್ಪ, 2018ರ ಚುನಾವಣೆಯಲ್ಲೂ ಅದನ್ನು ಪುನರಾವರ್ತಿಸಲಿದ್ದಾರೆ ಎಂಬ ಆಶಯದೊಂದಿಗೆ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಹೆಗಲಿಗೆ ಪಕ್ಷದ ರಾಜ್ಯಘಟಕದ ಜವಾಬ್ದಾರಿಯನ್ನು ಹೊರಿಸಿದೆ.
ಯಡಿಯೂರಪ್ಪ ಈ ಹಿಂದೆ 1989, 1991, 1997ರಲ್ಲಿ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಎ.14ರಂದು ನಾಲ್ಕನೆ ಬಾರಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಯಡಿಯೂರಪ್ಪ, ಆನಂತರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಆರೆಸ್ಸೆಸ್ ನಾಯಕರ ಭೇಟಿ: ಬಿಜೆಪಿ ಹೈಕಮಾಂಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ನನಗೆ ರಾಜ್ಯಾಧ್ಯಕ್ಷರ ಜವಾಬ್ದಾರಿಯನ್ನು ನೀಡಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಭ್ರಷ್ಟ ಹಾಗೂ ಜನ ವಿರೋಧಿ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆದು, ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ತನ್ನ ಗುರಿ. ಈ ನಿಟ್ಟಿನಲ್ಲಿ ಎ.24ರ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷವನ್ನು ಸಂಘಟಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಲಭ್ಯವಾಗಿರುವ ಹಿನ್ನೆಲೆಯಲ್ಲಿ ನಗರದ ಚಾಮರಾಜ ಪೇಟೆಯಲ್ಲಿರುವ ಕೇಶವಕೃಪದಲ್ಲಿ ಆರೆಸ್ಸೆಸ್ ನಾಯಕರನ್ನು ಭೇಟಿ ಮಾಡಿದ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ತನ್ನನ್ನು ಪರಿಗಣಿಸುವಂತೆ ಹಾರೈಸಿದ್ದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.







