ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯ
ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
.jpg)
ಸಾಗರ,ಎ.11: ಕಾನ್ಲೆ ಗ್ರಾಪಂ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದಲೂ ನೀರಿನ ಸಮಸ್ಯೆ ಉಂಟಾಗಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಅನೇಕ ಬಾರಿ ಅಧಿಕಾರಿಗಳನ್ನು ಸಂಪರ್ಕಿಸಿ, ಸಮಸ್ಯೆ ಬಗೆಹರಿಸುವಂತೆ ಕೇಳಿದ್ದರೂ, ಯಾವುದೇ ಪರಿಣಾಮ ಬೀರಿಲ್ಲ. ಇವತ್ತು ನೀರು ಬರುತ್ತದೆ, ನಾಳೆ ನೀರು ಬರುತ್ತದೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಸಬೂಬು ಹೇಳುತ್ತಿದ್ದಾರೆಯೇ ವಿನಃ ಸಮಸ್ಯೆ ಬಗೆಹರಿದಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಸೋಮವಾರ ತಾಳಗುಪ್ಪ ಹೋಬಳಿ ಬಿಜೆಪಿ ಘಟಕದ ವತಿಯಿಂದ ಕಾನ್ಲೆ ಗ್ರಾಪಂ ವ್ಯಾಪ್ತಿಯಲ್ಲಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸಾಗರ ನಗರಕ್ಕೆ ಶರಾವತಿ ಹಿನ್ನೀರಿನಿಂದ ಕುಡಿಯುವ ನೀರನ್ನು ತರುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲಿ ಬರುವ ತಾಳಗುಪ್ಪ ಹೋಬಳಿಯ 14 ಹಳ್ಳಿಗಳಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವ ತೀರ್ಮಾನವಾಗಿತ್ತು. ಇದಕ್ಕಾಗಿ ನಮ್ಮ ಸರಕಾರದ ಅವಧಿಯಲ್ಲಿ 4 ಕೋಟಿ ರೂ. ವನ್ನು ಪಾವತಿಸಲಾಗಿತ್ತು. ಈತನಕ ಹಿನ್ನೀರಿನ ನೀರು ತಾಳಗುಪ್ಪ ಹೋಬಳಿಯ 14 ಹಳ್ಳಿಗಳಿಗೆ ನೀಡಿಲ್ಲ. ಹೋಬಳಿಯ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಈ ಯೋಜನೆಯನ್ನು ತಕ್ಷಣ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದರು. ಜಿಪಂ ಸದಸ್ಯ ರಾಜಶೇಖರ ಗಾಳಿಪುರ ಮಾತನಾಡಿ, ಕಾನ್ಲೆ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಕಾಗೋಡು ತಿಮ್ಮಪ್ಪ ಅವರ ಗಮನಕ್ಕೆ ತರಲಾಗಿದೆ. ಅವರು ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರಿಗೆ ಸಮಸ್ಯೆ ಬಗೆಹರಿಸುವಂತೆ ತಿಳಿಸಿದ್ದಾರೆ. ಆದರೆ ಶಾಸಕರು ಈತನಕ ನೀರಿನ ಸಮಸ್ಯೆ ಬಗೆಹರಿಸಿಲ್ಲ. ಜನರಿಗೆ ನೀರು ಕೊಡಲು ವಿಫಲವಾಗಿರುವ ಶಾಸಕ ಮಧು ಬಂಗಾರಪ್ಪ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.







