ಸಾಗರ: ಮೇಟಿ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯ
ಸಾಗರ, ಎ.14: ತಾಲೂಕು ಆಡಳಿತ ಗುರುವಾರ ಹಮ್ಮಿಕೊಂಡಿದ್ದ ಡಾ. ಬಿ.ಆರ್.ಅಂಬೇಡ್ಕರ್‌ರ 125ನೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸದ ಹೆಸರಿನಲ್ಲಿ ದೇಶ ವಿರೋಧಿ ಭಾಷಣ ಮಾಡಿದ ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಮೇಟಿ ಮಲ್ಲಿಕಾರ್ಜುನ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರ ಠಾಣೆ ಎದುರು ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ವಿಪಕ್ಷ ನಾಯಕ ಸಂತೋಷ್ ಆರ್. ಶೇಟ್, ಡಾ. ಬಿ.ಆರ್. ಅಂಬೇಡ್ಕರ್ ದೇಶಕ್ಕೆ ಸಂವಿಧಾನದಂತಹ ಮಹತ್ವದ ಕೊಡುಗೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿಶ್ವದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ವಿಶ್ವಜ್ಞಾನ ದಿನವನ್ನು ಆಚರಿಸಲು ಸೂಚಿಸಿದೆ.
ಇಂತಹ ಸಂದರ್ಭದಲ್ಲಿ ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಮೇಟಿ ಮಲ್ಲಿಕಾರ್ಜುನ್ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕೇಂದ್ರ ಸರಕಾರವನ್ನು ಹಳಿಯುವ ಪ್ರಯತ್ನ ನಡೆಸಿರುವುದು ಖಂಡನೀಯ ಎಂದರು. ದೇಶದ್ರೋಹಿ ಅಫ್ಝಲ್ ಗುರು ಪರವಾಗಿ ಘೋಷಣೆ ಕೂಗಿರುವ ನ್ನಯ್ಯನನ್ನು ವೈಭವೀಕರಿಸಿ ಮಾತನಾಡಿದ ಮೇಟಿಯವರು, ದೇಶದಲ್ಲಿ ಅಸಮಾನತೆ ಇದ್ದು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಯಾವ ಪುರುಷಾರ್ಥಕ್ಕೆ ಕೂಗಬೇಕು ಎಂದು ಹೇಳುವ ಮೂಲಕ ದೇಶದ್ರೋಹಿ ಹೇಳಿಕೆ ನೀಡಿದ್ದಾರೆ ಎಂದು ದೂರಿದರು. ತಕ್ಷಣ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಹಾಗೂ ದೇಶದ್ರೋಹಿ ಹೇಳಿಕೆ ನೀಡಿರುವ ಮೇಟಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿದರು.







