ಬರಪೀಡಿತ ಕ್ಷೇತ್ರಕ್ಕೆ ತಲಾ 50 ಕೋಟಿ ರೂ. ಬಿಡುಗಡೆ
ಬೆಂಗಳೂರು, ಎ.14: ರಾಜ್ಯದಲ್ಲಿನ ಬರ ಪೀಡಿತ ಪ್ರದೇಶಗಳ ಜನರಿಗೆ ಕುಡಿಯುವ ನೀರು ಪೂರೈಕೆಗೆ ಈಗಾಗಲೇ ಪ್ರತಿ ವಿಧಾನಭಾ ಕ್ಷೇತ್ರಕ್ಕೆ ತಲಾ 50ಲಕ್ಷ ರೂ. ಹಣ ಬಿಡುಗಡೆ ಮಾಡಿದ್ದು, 70 ಕಡೆಗಳಲ್ಲಿ ಮೇವು ಬ್ಯಾಂಕ್ ಮತ್ತು 11ಕಡೆ ಗೋ ಶಾಲೆಗಳನ್ನು ತೆರೆಯಲಾಗಿದೆ ಎಂದು ರಾಜ್ಯ ಸರಕಾರ ತಿಳಿಸಿದೆ.
2015-16ನೆ ಸಾಲಿನಲ್ಲಿ ಕುಡಿಯುವ ನೀರು ಪೂರೈಸುವ ಉದ್ದೇಶಕ್ಕಾಗಿ 275 ಕೋಟಿ ರೂ. ಬಿಡುಗಡೆ ಮಾಡಿದ್ದು, 175 ಕೋಟಿ ರೂ.ವೆಚ್ಚ ಮಾಡಲಾಗಿದೆ. ಇತ್ತೀಚೆಗೆ 30 ಕೋಟಿ ರೂ. ಮಂಜೂರು ಮಾಡಲಾಗಿದ್ದು, ಬರ ಪೀಡಿತ ಪ್ರದೇಶಗಳಲ್ಲಿನ ಪರಿಹಾರ ಕಾರ್ಯಗಳ ಅಧ್ಯಯನಕ್ಕೆ ನಾಲ್ಕು ಸಮಿತಿ ರಚಿಸಲಾಗಿದೆ.
ಬರಕ್ಕೆ ತುತ್ತಾಗಿರುವ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎ.15ರಿಂದ ಪ್ರವಾಸ ಕೈಗೊಳ್ಳಲಿದ್ದು, ಮೊದಲ ಹಂತದಲ್ಲಿ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಎ.15ಕ್ಕೆ ಬೀದರ್-ಕಲಬುರ್ಗಿ, ಎ.16ಕ್ಕೆ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಎ.17ರ ರವಿವಾರ ವಿಜಯಪುರದಲ್ಲಿ ವಾಸ್ತವ್ಯ ಹೂಡಲಿದ್ದು, ಎ.18ರಂದು ವಿಜಯಪುರ, ಬಾಗಲಕೋಟೆ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.
ಬರ ಪೀಡಿತ ಪ್ರದೇಶಗಳ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು. ಸಮರೋಪಾದಿಯಲ್ಲಿ ಬರ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಪಂ ಸಿಇಒ ಹಾಗೂ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.







