ಕೆರೆ ಹೂಳೆತ್ತಲು ವಿಶೇಷ ಆದ್ಯತೆ ನೀಡಿ: ಸಿದ್ದರಾಮಯ್ಯ

ಬೆಂಗಳೂರು, ಎ.16: ಬರ ಪರಿಹಾರ ಕಾಮಗಾರಿ ಗಳನ್ನು ಸಮರ್ಪಕವಾಗಿ ನಿರ್ವಹಿಸದೆ, ನಿರ್ಲಕ್ಷ ವಹಿಸಿದರೆ ಶಿಸ್ತು ಕ್ರಮ ಜರಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆರೆ ಹೂಳೆತ್ತಲು ಅಧಿಕಾರಿಗಳು ವಿಶೇಷ ಆಸ್ಥೆ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶನಿವಾರ ಯಾದಗಿರಿ ಜಿಲ್ಲೆ ಬರ ಅಧ್ಯಯನ ಬಳಿಕ ಯಾದಗಿರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಕಲ್ಪಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು.
ಜಿಲ್ಲೆಯಲ್ಲಿ ಹೆಚ್ಚಿನ ಕೆರೆಗಳಿದ್ದು ಕೆರೆ ಹೂಳೆತ್ತುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸ ಬೇಕು. ಇಲ್ಲವಾದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದ ಅವರು, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸ ಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್, ಕೃಷಿ ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ಡಾ.ಮಾಲಕರೆಡ್ಡಿ, ಗುರುಪಾಟೀಲ್, ರಾಜಾ ವೆಂಕಟಪ್ಪ ನಾಯಕ, ಸಂಸದ ಭಗವಂತ ನಾಯಕ, ಜಿಲ್ಲಾಧಿಕಾರಿ ಮನೋಜ್ ಜೈನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಶ್ ಕಿಶೋರ ಸೂರಳ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಸೇರಿದಂತೆ ಇನ್ನಿತರರು ಹಾಜರಿದ್ದರು.





