ಮುಖ್ಯಮಂತ್ರಿ ಬದಲಾವಣೆ ಇಲ್ಲ: ಸಚಿವ ಜಾರ್ಜ್

ಬೆಂಗಳೂರು, ಎ.18: ಯಾವುದೇ ಸಂದರ್ಭದಲ್ಲೂ ಸಿಎಂ ಸಿದ್ದರಾಮಯ್ಯನವರನ್ನು ಹೈಕಮಾಂಡ್ ಬದಲಾವಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಪಕ್ಷದ ಒಳಗಿನ ಕೆಲವರು ಮತ್ತು ವಿಪಕ್ಷಗಳು ಈ ಸಂಬಂಧ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆಕ್ಷೇಪಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯ ಮಂತ್ರಿ ಸಿದ್ದರಾಮಯ್ಯರ ಬದಲಾ ವಣೆ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕ ಉಸ್ತುವಾರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಯಾರೂ ಈ ಬಗ್ಗೆ ಹೇಳಿಕೆ ನೀಡಿಲ್ಲ. ಆದರೂ, ಮಾಧ್ಯಮಗಳಲ್ಲಿ ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದರು.
ಪಕ್ಷದಲ್ಲಿ ಅಸಮಾಧಾನ ಸಹಜ, ಕೆಲ ಸಚಿವರ ವಿರುದ್ಧ ಕೆಲ ಶಾಸಕರು ತಮ್ಮ ಆಕ್ಷೇಪಗಳನ್ನು ಪಕ್ಷದ ವೇದಿಕೆಗಳಲ್ಲಿ ವ್ಯಕ್ತಪಡಿಸಿದ್ದಾರೆ. ಆದರೆ, ಹಿರಿಯ ಮುಖಂಡರಾದ ಜನಾರ್ದನ ಪೂಜಾರಿ, ಎಚ್.ವಿಶ್ವನಾಥ್, ಎಸ್.ಎಂ.ಕೃಷ್ಣ ಮಾಧ್ಯಮಗಳಲ್ಲಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ತಮಗೆ ಅಸಮಾಧಾನವಿದ್ದರೆ ಅದನ್ನು ಪಕ್ಷದ ವೇದಿಕೆಯಲ್ಲಿ ವ್ಯಕ್ತಪಡಿಸಬೇಕು. ಇಲ್ಲದಿದರೆ ಪಕ್ಷಕ್ಕೆ ಹಾನಿಯಾಗಲಿದೆ. ಸುಳ್ಳು ಸುದ್ದಿಗಳನ್ನು ಹಬ್ಬಿಸುವುದರಿಂದ ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬ ತಪ್ಪು ಸಂದೇಶ ರವಾನಿಸುವುದು ಸಲ್ಲ ಎಂದು ಜಾರ್ಜ್ ಇದೇ ವೇಳೆ ವಿರೋಧಿಗಳಿಗೆ ತಿರುಗೇಟು ನೀಡಿದರು.





