ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮನವಿ

ಕಾರವಾರ, ಎ.22: ಉತ್ತರ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಶುಕ್ರವಾರ ಮನವಿಯನ್ನು ಸಲ್ಲಿಸಿದ್ದಾರೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ವರ್ಷಂಪ್ರತಿ ಜನರಿಗೆ ಕುಡಿಯುವ ನೀರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಮೂಲಗಳು ಸಾಕಷ್ಟು ಪ್ರಮಾಣದಲ್ಲಿದೆ. ಅದರೆ ಸರಕಾರ ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಇಂದು ಕುಡಿಯುವ ನೀರಿಗಾಗಿ ಎಲ್ಲ ಕಡೆ ಹಾಹಾಕಾರ ಪಡುವಂತಹ ಸ್ಥಿತಿ ನಿರ್ಮಾಣವಾಗಿದ್ದು ಸಾರ್ವಜನಿಕರು ನೀರಿಗಾಗಿ ಮೈಲುಗಟ್ಟಲೆ ನಡೆಯಬೇಕಾಗಿದೆ. ಕುಡಿಯುವ ನೀರಿಗಾಗಿ ಸಾಕಷ್ಟು ಯೋಜನೆಗಳನ್ನು ಸರಕಾರ ಜಾರಿಗೆ ತಂದರೂ ಸಹ ಅದು ಸಮರ್ಥವಾಗಿ ಜಾರಿಯಾಗುತ್ತಿಲ್ಲ. ಇದರಿಂದ ಬೇಸತ್ತ ಜನರು ಸರಕಾರದ ವಿರುದ್ಧ ಶಪಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಗಂಭೀರವಾಗಿ ಕ್ರಮ ತೆಗೆದುಕೊಂಡು ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆಯನ್ನು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಯೋಜನೆಯನ್ನು ಅಥವಾ ಪರ್ಯಾಯ ವ್ಯವಸ್ಥೆಯನ್ನು ಕಾರ್ಯರೂಪಕ್ಕೆ ತರದಿದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದೆ.







