ಬರ ಪೀಡಿತ ಪ್ರದೇಶಗಳಿಗೆ ಸಿಎಂರಿಂದ 2ನೆ ಹಂತದ ಪ್ರವಾಸ
ಬೆಂಗಳೂರು, ಎ. 24: ರಾಜ್ಯದಲ್ಲಿನ ಭೀಕರ ಸ್ವರೂಪದ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ, ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಎ.25ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಗೆ ಎರಡನೆ ಹಂತದ ಪ್ರವಾಸ ತೆರಳಲಿದ್ದಾರೆ.
ಸೋಮವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ತೆರಳಲಿದ್ದು, ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1ಗಂಟೆಯ ವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಆ ಬಳಿಕ ಮಧ್ಯಾಹ್ನ 2:30ರಿಂದ ಸಂಜೆ 6:30ರ ವರೆಗೆ ಬೆಳಗಾವಿ ಜಿಲ್ಲೆಯ ಬರ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಲಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿ ಮೂಲಭೂತ ಸೌಲಭ್ಯಗಳ ಬಗ್ಗೆ ಖುದ್ದು ಅವಲೋಕನ ಮಾಡಲಿದ್ದಾರೆ.
ಮಂಗಳವಾರ ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಬರ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಲಿದ್ದು, ಆಯಾ ಜಿಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬುಧವಾರ ಗದಗ ಮತ್ತು ಕೊಪ್ಪಳ ಜಿಲ್ಲೆ ಪ್ರವಾಸ ಕೈಗೊಳ್ಳಲಿದು, ಎರಡು ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಿ, ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಮೊದಲ ಹಂತದಲ್ಲಿ ಸಿಎಂ ಸಿದ್ದರಾಮಯ್ಯ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಬರ ಪೀಡಿತ ಜಿಲ್ಲೆಗಳ ಪರಿಶೀಲನೆ ನಡೆಸಿ, ಆಯಾ ಜಿಲ್ಲೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಬರ ಪೀಡಿತ ಪ್ರದೇಶಗಳ ಜನರಿಗೆ ಕುಡಿಯುವ ನೀರು ಸೇರಿ ಅಗತ್ಯ ಸೌಲಭ್ಯ ಕಲ್ಪಿಸಲು ನಿರ್ದೇಶನ ನೀಡಿದ್ದರು.





