ಲೋಕಾಯುಕ್ತ ಪ್ರಕರಣಗಳು ಎಸಿಬಿಗೆ ವರ್ಗಾವಣೆ: ಸರಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು, ಎ.26: ಲೋಕಾಯುಕ್ತದಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಎಸಿಬಿಗೆ ವರ್ಗಾಯಿಸುವ ಸರಕಾರದ ಆದೇಶಕ್ಕೆ ಹೈಕೋರ್ಟ್ ಮುಂದಿನ ವಿಚಾರಣೆವರೆಗೆ ತಡೆ ನೀಡಿದೆ. ಈ ಸಂಬಂಧ ದಿ ಅಡ್ವೊಕೇಟ್ ಅಸೋಸಿಯೇಶನ್ ಬೆಂಗಳೂರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ರವಿ ಮಳೀಮಠ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಲೋಕಾಯುಕ್ತದಲ್ಲಿ ಬಾಕಿ ಇರುವ 1,500 ಪ್ರಕರಣಗಳನ್ನು ಎಸಿಬಿಗೆ ವರ್ಗಾಯಿಸಿ ಎಂದು ಸರಕಾರ ಆದೇಶ ನೀಡಿತ್ತು.
ಆದರೆ, ಈ ಆದೇಶವನ್ನು ಪ್ರಶ್ನಿಸಿ ದಿ ಅಡ್ವೋಕೇಟ್ ಅಸೋಸಿಯೇಷನ್‌ನವರು ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿ ಯಾವುದೇ ಕಾರಣಕ್ಕೂ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಎಸಿಬಿಗೆ ವರ್ಗಾಯಿಸಬಾರದೆಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಎಸಿಬಿಗೆ ವರ್ಗಾಯಿಸಿದರೆ ದಾಖಲಾಗಿರುವ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳ್ಳುವುದಿಲ್ಲ ಹಾಗೂ ಭ್ರಷ್ಟರು ಪ್ರಕರಣದಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ, ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಎಸಿಬಿಗೆ ವರ್ಗಾಯಿಸಬಾರದೆಂದು ನ್ಯಾಯಪೀಠಕ್ಕೆ ತಿಳಿಸಿದರು.
ಸರಕಾರದ ಪರ ವಾದಿಸಿದ ವಕೀಲರು ಲೋಕಾಯುಕ್ತದಲ್ಲಿ ಸಿಬ್ಬಂದಿ ಕೊರತೆಯಿರುವ ಹಿನ್ನೆಲೆಯಲ್ಲಿ ಸರಕಾರ ಪ್ರಕರಣಗಳನ್ನು ಎಸಿಬಿಗೆ ವರ್ಗಾಯಿಸಲು ಆದೇಶಿಸಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ವಾದ ಪ್ರತಿವಾದವನ್ನು ಆಲಿಸಿದ ವಿಭಾಗೀಯ ನ್ಯಾಯಪೀಠ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಮುಂದುವರಿಸಲು ಆದೇಶಿಸಿ ಎಸಿಬಿಗೆ ವರ್ಗಾಹಿಸಿದ್ದ ಪ್ರಕರಣಗಳನ್ನು ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆಗೆ ಆದೇಶಿಸಿತು.





