ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಸಾವು
ಶಿವಮೊಗ್ಗ, ಎ. 28: ಜಿಲ್ಲೆಯ ಶಿಕಾರಿಪುರ ಹಾಗೂ ತೀರ್ಥಹಳ್ಳಿ ತಾಲೂಕಿನಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಶಿಕಾರಿಪುರ ವರದಿ: ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಕೆರೂರು-ಶಿರಾಳಕೊಪ್ಪ ರಸ್ತೆಯ ಹುಲುಗಿನಕೊಪ್ಪ ಗ್ರಾಮದಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಶಿರಾಳಕೊಪ್ಪದ ಹರೀಶ್ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಹೊಟೇಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಗ್ರಾಮಕ್ಕೆ ಹಿಂದಿರುಗಿದ್ದು, ಕಾರ್ಯ ನಿಮಿತ್ತ ಸುಣ್ಣದಕೊಪ್ಪ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ವಾಹನ ವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತೀರ್ಥಹಳ್ಳಿ ವರದಿ: ತೀರ್ಥಹಳ್ಳಿ ಸಮೀಪ ಬೈಕ್‌ವೊಂದು ಪಲ್ಟಿಯಾಗಿ ಬಿದ್ದ ಪರಿಣಾಮ ಹಿಂಬದಿ ಸವಾರ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ರಾಜೇಶ್ ಮೃತಪಟ್ಟವರಾಗಿದ್ದು, ನಾಗೇಶ್ ಗಾಯಗೊಂಡಿದ್ದಾರೆ. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜೇಶ್‌ರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃಪಟ್ಟಿದ್ದಾರೆ. ಅಜಾಗರೂಕ ಚಾಲನೆಯೇ ಅವಘಡಕ್ಕೆ ಕಾರಣವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.





