ಸರಕಾರದ ಮುಖ್ಯಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್
ರಾಘವೇಶ್ವರಶ್ರೀಯವರ ಪದಚ್ಯುತಿಗೆ ಪಿಐಎಲ್ ಸಲ್ಲಿಕೆ

ಬೆಂಗಳೂರು, ಎ.28: ರಾಮಚಂದ್ರಾಪುರ ಮಠದ ರಾಘವೇಶ್ವರಶ್ರೀಯ ಪದಚ್ಯುತಿಗೆ ನಿರ್ದೇಶನ ಕೋರಿ ಪಿಐಎಲ್ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಸರಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.
ಈ ಸಂಬಂಧ ಈಶ್ವರ್ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾಯಮೂರ್ತಿ ರವಿ ಮಳೀಮಠ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಯ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದ್ದರೂ ಅವರು ದಿನನಿತ್ಯದ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ, ರಾಮಚಂದ್ರಾಪುರ ಮಠ ಸೇರಿದಂತೆ ರಾಜ್ಯದ ಮಠಗಳ ಮೇಲೆ ನಿಯಂತ್ರಣ ಹೇರಲಿಕ್ಕೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಬೇಕೆಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ನ್ಯಾಯಪೀಠ ಅರ್ಜಿಯನ್ನು ಪುರಸ್ಕರಿಸಿ ಕೋರ್ಟ್ ನೇರವಾಗಿ ಮಠಗಳ ಮೇಲೆ ನಿಯಂತ್ರಣ ಹೇರಲಿಕ್ಕೆ ಬರುವುದಿಲ್ಲ ಎಂದು ಸೂಚಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿ ವಿಚಾರಣೆಯನ್ನು ರಜೆ ಮುಗಿದ ಮೇಲೆ ಕೈಗೆತ್ತಿಕೊಳ್ಳುವುದಾಗಿ ಸೂಚಿಸಿತು.





