ಅಜ್ಜರಕಾಡು ಸರಕಾರಿ ಸ್ನಾತಕೋತ್ತರ ಕೇಂದ್ರದ ಕಟ್ಟಡ ಉದ್ಘಾಟನೆ

ಉಡುಪಿ, ಎ.28: ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಮೊದಲನೆ ಹಂತದ ಸ್ನಾತಕೋತ್ತರ ಕೇಂದ್ರದ ಕಟ್ಟಡವನ್ನು ಶಾಸಕ ಪ್ರಮೋದ್ ಮಧ್ವರಾಜ್ ಗುರುವಾರ ಉದ್ಘಾಟಿಸಿದರು.
ಮೂರು ವರ್ಷಗಳಲ್ಲಿ ಸರಕಾರ, ಯುಜಿಸಿ ಸೇರಿದಂತೆ ವಿವಿಧ ಮೂಲಗಳಿಂದ ಸುಮಾರು ಐದು ಕೋಟಿ ರೂ. ವೆಚ್ಚದಲ್ಲಿ ಕಾಲೇಜು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ. ಕಾಲೇಜಿಗೆ ಅಗತ್ಯವಿರುವ ಸಭಾಂಗಣ ಹಾಗೂ ಗ್ರಂಥಾಲಯ ಕಟ್ಟಡಕ್ಕೆ ಸರಕಾರದಿಂದ ಅನುದಾನ ಬಿಡುಗಡೆ ಮಾಡಲು ಪ್ರಯತ್ನಿಸಲಾಗುವುದು ಎಂದು ಪ್ರಮೋದ್ ಮಧ್ವರಾಜ್ ತಿಳಿಸಿದರು.
ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ನಗರಸಭೆ ಸದಸ್ಯೆ ಅಮೃತಾ ಕೃಷ್ಣಮೂರ್ತಿ, ಗುತ್ತಿಗೆದಾರ ಕಾಪು ವಾಸುದೇವ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಪ್ರಕಾಶ್ ಅಂದಾದ್ರೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಒಂದು ಕೋಟಿ ವೆಚ್ಚದಲ್ಲಿ ರೈಟ್ಸ್ ಸಂಸ್ಥೆ ನಿರ್ಮಿಸುವ ಎರಡನೆ ಹಂತದ ಕಾಮಗಾರಿಗೆ ಶಾಸಕರು ಶಿಲಾನ್ಯಾಸ ನೆರವೇರಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಜಗದೀಶ್ ರಾವ್ ಸ್ವಾಗತಿಸಿದರು. ಉಪನ್ಯಾಸಕ ಪ್ರಕಾಶ್ ಕ್ರಮಧಾರಿ ಕಾರ್ಯಕ್ರಮ ನಿರೂಪಿಸಿದರು.







