ಹೊರಗುತ್ತಿಗೆ ಪೌರ ಕಾರ್ಮಿಕರಿಗೂ ಉಪಾಹಾರ
ಸರಕಾರ ನಿರ್ಧಾರ
ಮಡಿಕೇರಿ, ಎ.29: ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಪೌರಕಾ ರ್ಮಿಕರಿಗೂ ಬೆಳಗ್ಗಿನ ಉಪಾಹಾರ ನೀಡಲು ಸರಕಾರ ತೀರ್ಮಾನಿಸಿದ್ದು, ಇದು ಎ.30 ರಿಂದಲೇ ಜಾರಿಗೆ ಬರಲಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ನಾರಾಯಣ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಕುಂದುಕೊರತೆ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈಗಾಗಲೇ ಖಾಯಂ ಪೌರಕಾರ್ಮಿಕರಿಗೆ ಬೆಳಗ್ಗಿನ ಉಪಾಹಾರ ವ್ಯವಸ್ಥೆ ಮಾಡಲಾಗಿದ್ದು, ಅದನ್ನು ಹೊರ ಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿ ಕರಿಗೂ ವಿಸ್ತರಿಸಲಾಗಿದೆ. ಈ ಕಾರ್ಯವು ಎ. 30ರಿಂದಲೇ ಜಾರಿಗೆ ಬರಲಿದೆ ಎಂದು ನಾರಾಯಣ ತಿಳಿಸಿದರು. ಪೌರಕಾರ್ಮಿಕರು ಬೆಳಗ್ಗಿನ ಜಾವ ಹಸಿವಿನಲ್ಲಿ ನಗರ ಮತ್ತು ಪಟ್ಟಣ ಪ್ರದೇಶಗಳನ್ನು ಶುಚಿಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಹಸಿವಿನಿಂದ ಬಳಲುವುದರಿಂದ ಬೇಗ ಅನಾರೋಗ್ಯಕ್ಕೆ ತುತ್ತಾಗುತ್ತಾರೆ ಎಂಬುದನ್ನು ಮನಗಂಡು ಸರಕಾರ ಪೌರಕಾರ್ಮಿಕರಿಗೆ ಬೆಳಗಿನ ಉಪಾಹಾರ ನೀಡುವ ವ್ಯವಸ್ಥೆಯನ್ನು ಜಾರಿ ಮಾಡಿತ್ತು ಎಂದು ಅವರು ಹೇಳಿದರು. ರಾಜ್ಯದಲ್ಲಿ 35 ಸಾವಿರ ಗುತ್ತಿಗೆ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಹೊರಗುತ್ತಿಗೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸರಕಾರದ ಸವಲತ್ತುಗಳು ಸಮರ್ಪಕವಾಗಿ ದೊರೆಯದೆ ಶೋಷಣೆಗೆ ಒಳಗಾಗುತ್ತಿದ್ದಾರೆ. ಆದ್ದರಿಂದ ಗುತ್ತಿಗೆ ಪದ್ಧತಿಯನ್ನು ರದ್ದುಪಡಿ ಸುವಂತೆ ಕೋರಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ (ಮೇ.4 ರಂದು) ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು ಹೇಳಿದರು. ಜಿಲ್ಲೆಯಲ್ಲಿ ಖಾಯಂ ಮತ್ತು ಗುತ್ತಿಗೆ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಎಲ್ಲರಿಗೂ ಸರಕಾರದ ಸೌಲಭ್ಯಗಳು ತಲುಪಬೇಕು. ಸಮಾ ಜದ ಕಟ್ಟಕಡೆಯ ಜನರ ಕಲ್ಯಾಣಕ್ಕಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಪೌರಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ಮುಂದಾಗಿದ್ದು, ಆ ನಿಟ್ಟಿನಲ್ಲಿ ಪೌರಕಾರ್ಮಿಕರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಂದಾಗಿದೆ. ಇದು ಶೀಘ್ರ ಕಾರ್ಯರೂಪಕ್ಕೆ ಬರಲಿದೆ ಎಂದು ಅವರು ತಿಳಿಸಿದರು. ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಮಾತನಾಡಿ, ಮೈಸೂರಿನ ಪೌರಕಾರ್ಮಿಕರಿಗೆ ಒದಗಿಸಲಾಗುವ ಆರೋಗ್ಯ ತಪಾಸಣಾ ಸೌಲಭ್ಯದಂತೆ ಇಲ್ಲಿನ ಪೌರಕಾರ್ಮಿಕರಿಗೂ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪೌರಕಾರ್ಮಿಕರಿಗೆ ಕನಿಷ್ಠ ವೇತನ ಪಿ.ಎಫ್ ಸೌಲಭ್ಯ, ಮತ್ತಿತರ ಸಂಬಂಧ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾ ಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಜಿಲ್ಲಾ ಮಟ್ಟದಲ್ಲಿ ತಂಡವನ್ನು ರಚಿಸಲಾಗುವುದು ಎಂದು ಅವರು ಹೇಳಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಬಿ.ಬಿ.ಪುಷ್ಪಾವತಿ, ಜಿಪಂ ಸಿಇಒ ಚಾರುಲತಾ ಸೋಮಲ್, ಪಪಂ ಮುಖ್ಯಾ ಧಿಕಾರಿಗಳಾದ ಕೃಷ್ಣಪ್ರಸಾದ್, ಕೃಷ್ಣೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ, ಜಿಲ್ಲಾ ಸರ್ಜನ್ ಡಾ.ಮುತ್ತಪ್ಪ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಾಯಾದೇವಿ ಗಲಗಲಿ ಉಪಸ್ಥಿತರಿದ್ದರು.







