ಮಾಹಿತಿ ಆಯುಕ್ತರಾಗಿ ನರಸಿಂಹರಾಜು ಪ್ರಮಾಣ ವಚನ

ಬೆಂಗಳೂರು, ಮೇ 2: ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾಗಿ ಡಿ.ಎನ್.ನರಸಿಂಹ ರಾಜು, ರಾಜಭವನದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಮುಖ್ಯ ಮಾಹಿತಿ ಆಯುಕ್ತ ನರಸಿಂಹರಾಜು ಅವರಿಗೆ ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ನರಸಿಂಹರಾಜು ಅವರು ಆಂಗ್ಲ ಭಾಷೆಯಲ್ಲಿ ಹಾಗೂ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಮುನ್ನ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ರಾಜ್ಯ ಮಾಹಿತಿ ಆಯುಕ್ತರ ನೇಮಕಾತಿ ಕುರಿತಂತೆ ರಾಜ್ಯಪಾಲರು ಹೊರಡಿಸಿರುವ ಆದೇಶವನ್ನು ವಾಚಿಸಿ, ಕಾರ್ಯಕ್ರಮವನ್ನು ನಿರ್ವಹಿಸಿಕೊಟ್ಟರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾಹಿತಿ ಆಯುಕ್ತರಾಗಿ ಈ ಹಿಂದೆ ಸೇವೆ ಸಲ್ಲಿಸಿದ್ದ ಕೆ.ಕೆ.ಮಿಶ್ರಾ ಹಾಗೂ ಎ.ಕೆ.ಎಂ.ನಾಯಕ್, ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ, ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಎಂ.ಕೆ. ಶಂಕರಲಿಂಗೇಗೌಡ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಎಸ್.ವಿ.ರಂಗರಾಥ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ಸಿಎಂ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಪೊಲೀಸ್ ಮಹಾ ನಿರ್ದೇಶಕ ಪಿ.ಓಂಪ್ರಕಾಶ್ ಉಪಸ್ಥಿತರಿದ್ದರು.





