ಸಾಗರ: ಅಧಿಕಾರಿಗಳೊಂದಿಗೆ ಸಚಿವ ಶ್ರೀನಿವಾಸ್ ಪ್ರಸಾದ್ ಸಭೆ
.jpg)
ಸಾಗರ, ಮೇ 11: ಮುಖ್ಯಮಂತ್ರಿಯವರ ಸೂಚನೆಯಂತೆ ರಾಜ್ಯದ ಬರಪರಿಸ್ಥಿತಿಯನ್ನು ಅಧ್ಯಯನ ಮಾಡಲು ಸಚಿವ ಸಂಪುಟದ ನಾಲ್ಕು ಉಪಸಮಿತಿಗಳು ರಾಜ್ಯದ ಬೇರೆಬೇರೆ ಕಡೆಗಳಲ್ಲಿ ಪ್ರವಾಸ ಮಾಡಿ ಬರದ ಅನುಭವವನ್ನು ಪ್ರತ್ಯಕ್ಷವಾಗಿ ಕಂಡಿವೆ ಎಂದು ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ತಿಳಿಸಿದರು.
ಇಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬರ ಅಧ್ಯಯನಕ್ಕೆ ಹೊರಟ ನಾಲ್ಕು ತಂಡಗಳು ತಕ್ಷಣ ಸಭೆ ನಡೆಸಿ, ಅಧ್ಯಯನ ವರದಿಯನ್ನು ಸಿದ್ಧಪಡಿಸಿ ಸಚಿವ ಸಂಪುಟದ ಮುಂದೆ ಇಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಗತ್ಯ ಇರುವ ಕಡೆಗಳಿಗೆ ಹಣ ಬಿಡುಗಡೆ ಮಾಡಲು ಪ್ರಯತ್ನ ನಡೆಸಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಮೇವಿನ ಕೊರತೆ ಕಂಡು ಬರದೇ ಇದ್ದರೂ ಕುಡಿಯುವ ನೀರಿನ ಸಮಸ್ಯೆ ಅತ್ಯಂತ ಗಂಭೀರವಾಗಿದೆ. ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಹಣಕಾಸಿನ ತೊಂದರೆ ಇಲ್ಲ. ಅಧಿಕಾರಿಗಳು ತಕ್ಷಣ ಅಗತ್ಯ ಇರುವ ಕಡೆಗಳಲ್ಲಿ ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಯೋಜನೆ ರೂಪಿಸಿ, ಕಾರ್ಯರೂಪಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಈಗಾಗಲೇ ಕೇಂದ್ರ ಸರಕಾರ ರಾಜ್ಯಕ್ಕೆ ನೀಡಿರುವ 1,573 ಕೋಟಿ ರೂ. ಹಣವನ್ನು ವಿನಿಯೋಗ ಮಾಡಲಾಗಿದೆ. ಇನ್ನಷ್ಟು ಹಣ ನೀಡುವಂತೆ ಮುಖ್ಯಮಂತ್ರಿಯವರ ನೇತೃತ್ವದ ನಿಯೋಗ ಪ್ರಧಾನಿ ಅವರಿಗೆ ಮನವಿ ಸಲ್ಲಿಸಿದೆ. ಹಿಂಗಾರು ಕೈಕೊಟ್ಟಿರುವುದು ರಾಜ್ಯಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ. ಇದನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಮರೋಪಾದಿಯ ಕಾರ್ಯ ಹಮ್ಮಿಕೊಳ್ಳಲಿದೆ ಎಂದರು. ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮಾತನಾಡಿ, ನಮ್ಮ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ತಾಲೂಕಿನಲ್ಲಿ ಸುಮಾರು 700ಕ್ಕೂ ಹೆಚ್ಚು ಬಾವಿಗಳು ಬತ್ತಿದೆ. ಮುಂದಿನ ಒಂದು ವಾರದಲ್ಲಿ ಅಗತ್ಯ ಮಳೆ ಬೀಳದೆ ಇದ್ದಲ್ಲಿ ಇನ್ನು ಸಾವಿರಾರು ಬಾವಿಗಳು ಬತ್ತುವ ಸಾಧ್ಯತೆ ಇದೆ ಎಂದರು.
ಸಾಗರ ತಾಲೂಕಿನ ಪರಿಸ್ಥಿತಿ ಸೊರಬ ತಾಲೂಕಿಗಿಂತ ಭಿನ್ನವಾಗಿಲ್ಲ. ಆದ್ದರಿಂದ ಸಾಗರ ತಾಲೂಕನ್ನೂ ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಕುಡಿಯುವ ನೀರಿನ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳಲು ಜಿಲ್ಲೆಯ ಪ್ರತಿ ತಾಲೂಕಿಗೆ ಹೆಚ್ಚುವರಿ 75 ಲಕ್ಷ ರೂ. ಬಿಡುಗಡೆ ಮಾಡಲು ಸರಕಾರಕ್ಕೆ ಶಿಫಾರಸು ಮಾಡಿ ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿ, ಕಾರ್ಯನಿರ್ವಾಹಣಾಧಿಕಾರಿ ರಾಕೇಶ್ ಕುಮಾರ್, ಉಪವಿಭಾಗಾಧಿಕಾರಿಗಳಾದ ಡಿ.ಎಂ.ಸತೀಶ ಕುಮಾರ್, ಕೃಷ್ಣಮೂರ್ತಿ, ಜಿಲ್ಲಾ ರಕ್ಷಣಾಧಿಕಾರಿ ರವಿ ಚೆನ್ನಣ್ಣನವರ್, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸಾಗರ ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಜರಿದ್ದರು.







