ವೈದ್ಯ ಪ್ರವೇಶ ಪರೀಕ್ಷೆಗಳು ಪ್ರಾದೇಶಿಕ ಭಾಷೆಯಲ್ಲಿರಲಿ: ಸಂಸದರ ಒತ್ತಾಯ
ಹೊಸದಿಲ್ಲಿ, ಮೇ 11: ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಲೋಕಸಭಾ ಸದಸ್ಯರು ಇಂದು ಪಕ್ಷಭೇದ ಮರೆತು ಒತ್ತಾಯಿಸಿದ್ದಾರೆ.
ಈ ವರ್ಷದಿಂದಲೇ ದೇಶಕ್ಕೆ ಒಂದೇ ಪರೀಕ್ಷೆಯನ್ನು ನಡೆಸಬೇಕೆನ್ನುವ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸಂಸದರು ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ಸದಸ್ಯರ ಕಳವಳವನ್ನು ಹಂಚಿಕೊಂಡ ಸರಕಾರ, ನೂತನ ವ್ಯವಸ್ಥೆಯನ್ನು ಅಳವಡಿಸಿಕೊಳ್ಳ್ಳುವುದಕ್ಕೆ ಹೆಚ್ಚಿನ ಕಾಲಾವಕಾಶ ಬೇಕು ಎಂಬುದಾಗಿ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿತು.
ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್) ಮೂಲಕ ಏಕೈಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸುವಂತೆ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರ ಮತ್ತು ಸಿಬಿಎಸ್‌ಇಗೆ ಸೂಚನೆ ನೀಡಿತ್ತು. ತಮಗೆ ಪ್ರತ್ಯೇಕ ಪ್ರವೇಶ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಬೇಕು ಎಂಬ ರಾಜ್ಯ ಸರಕಾರಗಳು, ಖಾಸಗಿ ಸಂಸ್ಥೆಗಳು ಮತ್ತು ಅಲ್ಪಸಂಖ್ಯಾತರ ಸಂಸ್ಥೆಗಳ ಮನವಿಗಳನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಸದಸ್ಯರ ಭಾವನೆಗಳನ್ನು ಹಂಚಿಕೊಂಡ ಸಂಸದೀಯ ವ್ಯವಹಾರಗಳ ಸಚಿವ ಎಂ. ವೆಂಕಯ್ಯ ನಾಯ್ಡು, ಸರಕಾರ ತಾತ್ವಿಕವಾಗಿ ಸಾಮಾನ್ಯ ಜಂಟಿ ಪ್ರವೇಶ ಪರೀಕ್ಷೆ ನಡೆಸುವುದರ ಪರವಾಗಿದೆ ಎಂದು ಹೇಳಿದರು.





