ವೃತ್ತಿಪರ ಶಿಕ್ಷಣದಲ್ಲಿ ಕನ್ನಡ ಕಡ್ಡಾಯ: ಉನ್ನತ ಶಿಕ್ಷಣ ಇಲಾಖೆಯ ಆದೇಶ

ಬೆಂಗಳೂರು, ಮೇ 12: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಮುಂದಿನ ಸಾಲಿನಿಂದ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ಗಳಲ್ಲಿ ಮೊದಲ ವರ್ಷ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಒಂದು ವಿಷಯವನ್ನಾಗಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಲಿಯಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ.
ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಸಂಬಂಧ ಕನ್ನಡ ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಬೋರಲಿಂಗಯ್ಯ ನೇತೃತ್ವದ ಸಮಿತಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಪ್ರಮುಖವಾಗಿ ವೃತ್ತಿ ಶಿಕ್ಷಣ ಕೋರ್ಸ್‌ಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವಂತೆ ಶಿಫಾರಸು ಮಾಡಲಾಗಿತ್ತು. ವರದಿಯ ಶಿಫಾರಸಿನಂತೆ ಉನ್ನತ ಶಿಕ್ಷಣ ಇಲಾಖೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಇದನ್ನು ಅನುಷ್ಠಾನಗೊಳಿಸಲು ಮುಂದಾಗಿದೆ.
ಕನ್ನಡ ವಿದ್ಯಾರ್ಥಿಗಳಿಗೊಂದು ಮತ್ತು ಹೊರನಾಡ ಕನ್ನಡಿಗರಿಗೊಂದು ಪ್ರತ್ಯೇಕ ಪಠ್ಯ ಸಿದ್ಧಗೊಳ್ಳಲಿದೆ. ಅದೇ ರೀತಿ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಪಠ್ಯವನ್ನು ಈಗಾಗಲೇ ಸಿದ್ಧಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
ಈಗಾಗಲೇ ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ, ಹಂಪಿ ಕನ್ನಡ ವಿವಿಯ ಸಹಭಾಗಿತ್ವದಲ್ಲಿ ಪಠ್ಯಪುಸ್ತಕ ಸಿದ್ಧಪಡಿಸಲು ರಾಜ್ಯ ಸರಕಾರ ನಿರ್ದೇಶನ ನೀಡಿದೆ. ಅಲ್ಲದೆ, ಮೊದಲ ವರ್ಷದ ಕೋರ್ಸ್‌ಗಳಲ್ಲಿ ಕನ್ನಡ ಕಡ್ಡಾಯವಾದರೂ ಪರೀಕ್ಷೆಯಲ್ಲಿ ಬರುವ ಅಂಕಗಳು ಮಾತ್ರ ಪರಿಗಣನೆಗೆ ಒಳಪಡುವುದಿಲ್ಲ. ಇದಕ್ಕೆ ವಿಶೇಷ ರಿಯಾಯ್ತಿ ನೀಡಲಾಗಿದೆ.
ಈ ಸಂಬಂಧ ಈಗಾಗಲೇ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಿಗೂ ಸುತ್ತೋಲೆ ಹೊರಡಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಉಪ ಕುಲಪತಿಗಳಿಗೆ ಇಲಾಖೆ ಸೂಚನೆ ಕೊಟ್ಟಿದೆ.







