ಪುತ್ತೂರು: ಮೇ 16ರಿಂದ ವಿಶೇಷ ದಾಖಲಾತಿ ಆಂದೋಲನ

ಪುತ್ತೂರು, ಮೇ 13: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ವತಿಯಿಂದ ಪುತ್ತೂರು ತಾಲೂಕಿನಾದ್ಯಂತ ಶಿಕ್ಷಣ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮೇ 16ರಿಂದ 31ರ ತನಕ ವಿಶೇಷ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್ ತಿಳಿಸಿದ್ದಾರೆ.
ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಶಿಕ್ಷಣವು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದ್ದು, ಎಲ್ಲಾ ಮಕ್ಕಳಿಗೂ ಗುಣಾತ್ಮಕ ಶಿಕ್ಷಣವನ್ನು ಒದಗಿಸುವುದು ಸರಕಾರದ, ಪೋಷಕರ ಮತ್ತು ನಮ್ಮೆಲ್ಲರ ಕರ್ತವ್ಯವಾಗಿರುತ್ತದೆ.
6-14 ವಯೋಮಾನದ ಎಲ್ಲಾ ಮಕ್ಕಳಿಗೆ ಯಾವುದೇ ತಾರತಮ್ಯವಿಲ್ಲದೆ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣವನ್ನು ಒದಗಿಸುವುದು, ಎಲ್ಲಾ ಮಕ್ಕಳು ಕಡ್ಡಾಯವಾಗಿ ಶಾಲೆಗೆ ದಾಖಲಾಗುವುದು ಮತ್ತು ದಾಖಲಾದ ಎಲ್ಲಾ ಮಕ್ಕಳು ಶಾಲೆಯಲ್ಲಿ ಉಳಿಯಬೇಕು ಎನ್ನುವುದು ಶಿಕ್ಷಣ ಹಕ್ಕು ಕಾಯ್ದೆಯ ಮುಖ್ಯ ಉದ್ದೇಶವಾಗಿದೆ. ಡಿಸೆಂಬರ್ ತಿಂಗಳಿನಲ್ಲಿ ನಡೆದ ಸಮೀಕ್ಷೆಯಲ್ಲಿ ರಾಜ್ಯದಲ್ಲಿ 9,468 ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲಾಗಿದ್ದು, ಪುತ್ತೂರು ತಾಲೂಕಿನಲ್ಲಿ 16 ಮಕ್ಕಳನ್ನು ಗುರುತಿಸಲಾಗಿದೆ. ಇವರನ್ನು ಮುಖ್ಯವಾಹಿನಿಗೆ ತರಲಾಗುತ್ತಿದೆ.
ಅದರಂತೆ ದಾಖಲಾಗಲು ಅರ್ಹ 5+ ವಯೋಮಾನದ ಎಲ್ಲಾ ಮಕ್ಕಳನ್ನು ಗುರುತಿಸಿ ನೇರವಾಗಿ ಶಾಲೆಗೆ ದಾಖಲಿಸುವುದು ಶಾಲೆಗೆ ಬರುತ್ತಿರುವ ಎಲ್ಲಾ ಮಕ್ಕಳನ್ನು ಶಾಲಾ ಪ್ರಾರಂಭದ ದಿನದಂದೇ ಶಾಲೆಗೆ ಹಾಜರಾಗುವಂತೆ ಮಾಡುವ ಉದ್ದೇಶದಿಂದ ದಾಖಲಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷ ದಾಖಲಾತಿ ಆಂದೋಲನವು ಪ್ರತಿ ಶಾಲೆ, ಕ್ಲಸ್ಟರ್ ಮತ್ತು ಬ್ಲಾಕ್ ಹಂತದಲ್ಲಿ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







