ಕಳಿಂಗ ವಿವಿಯ ಒಪ್ಪಂದದೊಂದಿಗೆ ಸರಕಾರಿ ಶಾಲೆಗಳ ಅಭಿವೃದ್ಧಿ: ಎಚ್.ಆಂಜನೇಯ

ಬೆಂಗಳೂರು, ಮೇ 17: ಕಳಿಂಗ ವಿಶ್ವವಿದ್ಯಾನಿಲಯದೊಂದಿಗೆ ಒಪ್ಪಂದವೊಂದನ್ನು ಮಾಡಿಕೊಂಡು, ಅಲ್ಲಿಯ ಶಾಲೆಗಳಲ್ಲಿ ನಡೆಯುವ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ರಾಜ್ಯದ ಶಾಲೆಯೊಂದರಲ್ಲಿ ಮೊದಲು ಪ್ರಾಯೋಗಿಕವಾಗಿ ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
ಮಂಗಳವಾರ ನಗರದ ಕುರುಬರಹಳ್ಳಿಯ ನಮ್ಮೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಐಎಸ್‌ಎಸ್ ಆಯೋಜಿಸಿದ್ದ ಆರ್ಟ್ ಆಫ್ ಗಿವಿಂಗ್‌ನ 3ನೆ ವರ್ಷದ ವರ್ಷಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಳಿಂಗ ವಿಶ್ವವಿದ್ಯಾನಿಲಯ ಬುಡಕಟ್ಟು ಜನಾಂಗದ ಮಕ್ಕಳಿಗೆ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಕಲಿಸಿಕೊಟ್ಟು ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತೆ ಮಾಡುತ್ತಿದೆ. ಇದೇ ಮಾದರಿಯನ್ನು ರಾಜ್ಯದ ಸರಕಾರಿ ಶಾಲೆಯೊಂದರಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರುವ ಮೂಲಕ ಸರಕಾರಿ ಶಾಲೆಗಳನ್ನೂ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದೆ ಎಂದು ಹೇಳಿದರು.
ಖಾಸಗಿ ಶಾಲೆಗಳಿಂದು ಮಾನವೀಯತೆ, ಹೃದಯ ವಾತ್ಸಲ್ಯವನ್ನು ಮರೆತು ದಡ್ಡರನ್ನು ಬುದ್ಧಿವಂತರನ್ನಾಗಿ ಮಾಡುವ ಬದಲು ಬುದ್ಧಿವಂತರನ್ನೇ ಬುದ್ಧಿವಂತರನ್ನಾಗಿ ಮಾಡುವ ಕೆಲಸಕ್ಕೆ ಕೈಹಾಕಿವೆ. ಇದರಿಂದ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಮಕ್ಕಳಿಗೆ ಅನ್ಯಾಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರಕಾರ ಈಗಾಗಲೇ ಆರ್‌ಟಿಇ ಕಾಯ್ದೆ ಜಾರಿ ಹಾಗೂ ವಸತಿ ಶಾಲೆಗಳ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಿದೆ ಎಂದು ಹೇಳಿದರು.
ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲವೆಂಬ ಅಪವಾದವಿದ್ದರೂ ಡಾ.ಬಿ.ಆರ್.ಅಂಬೇಡ್ಕರ್, ಡಾ.ರಾಧಾಕೃಷ್ಣ, ಸರ್.ಎಂ.ವಿಶ್ವೇಶ್ವರಯ್ಯ ಸೇರಿ ಇನ್ನಿತರರು ಇಂತಹ ಶಾಲೆಗಳಲ್ಲೇ ಓದಿ ಮಹಾನ್ ಸಾಧಕರಾಗಿದ್ದಾರೆ ಎಂದು ಸ್ಮರಿಸಿದರು. ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಮಾತನಾಡಿ, ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಆವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕ ಕೆ.ಗೋಪಾಲಯ್ಯ, ಬಿಬಿಎಂಪಿ ಉಪಮೇಯರ್ ಎಸ್.ಪಿ.ಹೇಮಲತಾ, ಪತ್ರಕರ್ತ ರವಿ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.







