ಬಿತ್ತನೆ ಬೀಜ, ರಸಗೊಬ್ಬರ ಪೂರೆಸಿ:ರಾಜ್‌ಕುಮಾರ್ ಖತ್ರಿ
ಮುಂಗಾರು ಮುಂಜಾಗ್ರತೆ

ಮಡಿಕೇರಿ, ಮೇ 26: ಜಿಲ್ಲೆಯಲ್ಲಿ ಜೂನ್ ಎರಡನೆ ವಾರದಿಂದ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆ ಇದ್ದು, ಮುಂಗಾರು ಅವಧಿಯಲ್ಲಿ ರೈತರಿಗೆ ಬೇಕಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜ್‌ಕುಮಾರ್ ಖತ್ರಿ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೈತರಿಗೆ ಅತ್ಯಗತ್ಯವಾಗಿ ಬೇಕಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಕೆ ಮಾಡಬೇಕು. ರೈತರಿಗೆ ಸಹಾಯಧನದಡಿ ಕಲ್ಪಿಸುವ ಸೌಲಭ್ಯಗಳನ್ನು ಸಕಾಲದಲ್ಲೊದಗಿಸುವಂತೆ ರಾಜ್‌ಕುಮಾರ್ ಖತ್ರಿ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇನ್ನೂ ಕೇಳಿಬರುತ್ತಿವೆ. ಈ ಬಗ್ಗೆ ಗಮನ ಹರಿಸುವಂತೆ ಪಂಚಾಯತ್ ರಾಜ್ ಇಂಜಿನಿಯರ್ ಅವರಿಗೆ ಸೂಚನೆ ನೀಡಿದರು. ನಗರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಗಮನಹರಿಸುವಂತೆ ತಿಳಿಸಿದರು. ಜಮ್ಮಾಬಾಣೆ ಸಂಬಂಧಿಸಿದಂತೆ ಕಂದಾಯ ನಿಗದಿ ಮಾಡುವುದು, ಸರ್ವೇಗೆ ಬಾಕಿ ಇರುವುದು ಮತ್ತಿತರ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಆಗಬೇಕಿರುವ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ರಾಜ್‌ಕುಮಾರ್ ಖತ್ರಿ ನಿರ್ದೇಶನ ನೀಡಿದರು.
ಸಾಮಾಜಿಕ ಭದ್ರತಾ ಯೋಜನೆಗಳನ್ನು ಅರ್ಹರಿಗೆ ತಲುಪಿಸುವುದು, ಈ ಯೋಜನೆಯಡಿ ಸ್ವೀಕೃತವಾದ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಸಕಾಲ ಯೋಜನೆಯಲ್ಲಿ ಉತ್ತಮ ಸಾಧನೆ ಮಾಡಬೇಕು. ವೀರಾಜಪೇಟೆ ತಾಲೂಕು ಕಚೇರಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡುವಂತೆ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್, ಜಿಪಂ ಸಿಇಒ ಚಾರುಲತಾ ಸೋಮಲ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ ಉಪಸ್ಥಿತರಿದ್ದರು







