ರಾಜ್ಯಸಭೆಗೆ ಮೂರನೆ ಅಭ್ಯರ್ಥಿ ಸ್ಪರ್ಧೆ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮೇ 28: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಇಬ್ಬರು ಅಭ್ಯರ್ಥಿಗಳನ್ನು ಹೈಕಮಾಂಡ್ ಪ್ರಕಟಿಸಿದ್ದು, ಮೂರನೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಶನಿವಾರ ವಿಕಾಸಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ಆಸ್ಕರ್ ಫರ್ನಾಂಡಿಸ್ ಮತ್ತು ಜಯರಾಂ ರಮೇಶ್ ಅವರನ್ನು ಅಭ್ಯರ್ಥಿಗಳನ್ನಾಗಿ ಪ್ರಕಟಿಸಿದ್ದು, ಮೂರನೆ ಅಭ್ಯರ್ಥಿ ಆಯ್ಕೆಗೆ ಪಕ್ಷೇತರರು ಹಾಗೂ ಜೆಡಿಎಸ್ ಶಾಸಕರಿಗೆ ಮನವಿ ಮಾಡಲಾಗುವುದು ಎಂದರು.
ಶಾಸಕ ಝಮೀರ್ ಅಹ್ಮದ್, ತಮ್ಮ ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಿರುವ ಬಗ್ಗೆ ತನಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೂ, ಜೆಡಿಎಸ್ ಹಾಗೂ ಕಾಂಗ್ರೆಸ್ ಜಾತ್ಯತೀತ ಪಕ್ಷಗಳು. ಆ ಹಿನ್ನೆಲೆಯಲ್ಲಿ ಅವರ ಬೆಂಬಲವನ್ನೂ ಕೋರುತ್ತೇವೆ ಎಂದು ಪರಮೇಶ್ವರ್ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳನ್ನು ಇನ್ನೂ ಅಂತಿಮಗೊಳಿಸಿಲ್ಲ. ಶೀಘ್ರದಲ್ಲೆ ಪಕ್ಷದ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದ ಅವರು, ನಿನ್ನೆಯೆಷ್ಟೇ ತಾನು ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೈಕಮಾಂಡ್ ಭೇಟಿ ಮಾಡಿ ಈ ಸಂಬಂಧ ಸಮಾಲೋಚನೆ ನಡೆಸಿದ್ದೇವೆ ಎಂದರು.







