ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್
ಪ್ರತಿಭಾವಂತ ಪಿಯುಸಿ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭ

ತೀರ್ಥಹಳ್ಳಿ, ಮೇ 28: ಶಿಕ್ಷಣ ಸಂಸ್ಥೆಗಳು ಪ್ರತಿಭಾವಂತರನ್ನು ಉತ್ತೇಜಿಸುವುದರೊಂದಿಗೆ ಅವರಿಗೆ ಪ್ರೋತ್ಸಾಹ ನೀಡಬೇಕು. ಪರೀಕ್ಷೆಗಳ ಲಿತಾಂಶಗಳು ಏನೇ ಇರಲಿ, ಜೊತೆಗೆ ವೌಲ್ಯಾಧಾರಿತ ಶಿಕ್ಷಣದ ಅಗತ್ಯವಿದೆ ಹಾಗೂ ಸರಕಾರಿ ಶಾಲೆಗಳನ್ನು ಸಬಲೀಕರಣ ಮಾಡಲು ಪ್ರತಿಯೊಬ್ಬರ ಸಹಕಾರ ಬೇಕಾಗಿದೆ ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.
ಪಟ್ಟಣದ ತಾಪಂ ಸಭಾಂಗಣದಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ತಾಲೂಕಿನ ಮೂವರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.
ಈ ಬಾರಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ತೀರ್ಥಹಳ್ಳಿ ತಾಲೂಕು ಅದ್ಭುತ ಸಾಧನೆ ಮಾಡಿದೆ. ಮಕ್ಕಳನ್ನು ಹೆಚ್ಚು ಓದಿಸುವ ಆಸಕ್ತಿ ಪೋಷಕರಲ್ಲಿದೆ. ಮಕ್ಕಳು ಓದಿನ ಜೊತೆಗೆ ಇತರ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ತಾಲೂಕಿನ ಗುಡ್ಡೆಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಲು ಬೆಂಗಳೂರಿನ ಹೆಸರಾಂತ ಪತ್ರಿಕಾ ಸಂಸ್ಥೆಯೊಂದು 50 ಲಕ್ಷ ರೂ. ದೇಣಿಗೆ ನೀಡಲು ನಿರ್ಧರಿಸಿದ್ದಾರೆ ಎಂದರು.
ಶಿಕ್ಷಣ ಸಂಸ್ಥೆಗಳು ಪರೀಕ್ಷಾ ಸಮಯದಲ್ಲಿ ನಕಲು ಮಾಡುವ ಸಂಸ್ಕೃತಿಯ ಬಗ್ಗೆ ಹೆಚ್ಚು ನಿಗಾ ವಹಿಸಬೇಕಾಗಿದೆ. ನಕಲು ಮಾಡುವುದರಿಂದ ಪ್ರತಿಭಾವಂತ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಮುಂದಿನ ದಿನಗಳಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ನಕಲು ತಡೆಗಟ್ಟಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಚಿಂತನೆ ನಡೆಸಿದೆ ಎಂದರು.
ಇದೇ ಸಂದರ್ಭದಲ್ಲಿ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಸರಕಾರಿ ಜೂನಿಯರ್ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 591ಅಂಕ ಪಡೆದ ಕು. ತೇಜಸ್ವಿನಿ, 586ಅಂಕ ಪಡೆದ ನಿತೀಶ್‌ಕುಮಾರ್ ಹಾಗೂ ತುಂಗಾ ಪಪೂ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 585 ಅಂಕ ಪಡೆದ ದೀಕ್ಷಾ ಇವರನ್ನು ಸಚಿವರು ಸನ್ಮಾನಿಸಿದರು.
ವೇದಿಕೆಯಲ್ಲಿ ತಹಶೀಲ್ದಾರ್ ಲೋಕೇಶ್ವರಪ್ಪ, ಹೊಸನಗರ ತಹಶೀಲ್ದಾರ್ ಕುಲಕರ್ಣಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್, ಜಿಪಂ ಸದಸ್ಯೆ ಕಲ್ಪನಾ ಪದ್ಮನಾಭ್ ಉಪಸ್ಥಿತರಿದ್ದು, ಡಿ.ಎಸ್.ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.







