ಪೊಲೀಸರ ಸಮಸ್ಯೆ ಬಗೆ ಹರಿಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ

ಬೆಂಗಳೂರು ,ಜೂ.2: ರಾಜ್ಯದ ಪೊಲೀಸ್ ಸಿಬ್ಬಂದಿಗಳು ಜೂ.4 ರಂದು ಸಾಮೂಹಿಕ ರಜೆ ಹಾಕುವ ಮೂಲಕ ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್‌ನಲ್ಲಿ ವಕೀಲರಾದ ಅಮೃತೇಶ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಪ್ರಕರಣ ಕುರಿತಂತೆ ನ್ಯಾಯಾಲಯ ಮಧ್ಯ ಪ್ರವೇಶಿಸಬೇಕು.ಮಾತುಕತೆಯ ಮೂಲಕ ಸಮಸ್ಯೆ ಬಗೆ ಹರಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಪೊಲೀಸರು ತಮ್ಮ ಹಕ್ಕುಗಳಿಗಾಗಿ ವೇತನ ತಾರತಮ್ಯ, ರಜೆ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಹೋರಾಟ ನಡೆಸಲು ಮುಂದಾಗಿದ್ದಾರೆ. ಈ ಉದ್ದೇಶಕ್ಕಾಗಿ ಪೊಲೀಸರು ಪ್ರತಿಭಟನೆಗಿಳಿದರೆ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಲಿದೆ ಎಂದು ಅವರು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.
ಸರಕಾರ ಪೊಲೀಸರನ್ನು ಪ್ರತಿಭಟನೆಗೆ ಇಳಿಯದಂತೆ ಬೆದರಿಸುವುದನ್ನು ಕೈ ಬಿಟ್ಟು ನೊಂದ ಪೊಲೀಸರನ್ನು ಕರೆಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬೇಕು. ಪ್ರತಿಭಟನೆಯಿಂದ ಉಂಟಾಗುವ ಪರಿಸ್ಥಿತಿ ಅವಲೋಕಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಒಬ್ಬರನ್ನು ನೇಮಿಸಬೇಕು ಎಂದು ಪಿಐಎಲ್ ನಲ್ಲಿ ವಕೀಲ ಅಮೃತೇಶ್ ರಾಜ್ಯ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.





