ಅಡ್ಡ ಮತದಾನ ಮಾಡಿದರೆ ಕಠಿಣ ಕ್ರಮ: ಎಚ್‌ಡಿಕೆ
ರಾಜ್ಯಸಭೆ ಚುನಾವಣೆ

ಹುಬ್ಬಳ್ಳಿ, ಜೂ.4: ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಶಾಸಕರು ಅಡ್ಡ ಮತದಾನ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ.12ರಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಶಾಸಕರು ಯಾರಾದರೂ ಅಡ್ಡ ಮತದಾನ ಮಾಡಿದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಝಮೀರ್‌ಅಹ್ಮದ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದು ಅವರಿಗೆ ಮರೆತು ಹೋಗಿದೆ. ಈಗ ದೊಡ್ಡ ನಾಯಕರಾಗಿ ಬೆಳೆದಿರುವ ಅವರಿಗೆ ನಾವೇನು ಟಾಂಗ್ ಕೊಟ್ಟಿಲ್ಲ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.
ಹಾಸನ ಲೋಕಸಭಾ ಕ್ಷೇತ್ರದಿಂದ ಸ್ವತಃ ಝಮೀರ್‌ಅಹ್ಮದ್ ಚುನಾವಣೆಗೆ ನಿಲ್ಲುವುದಾದರೆ ನಾವೇ ಅವರಿಗೆ ಟಿಕೆಟ್ ನೀಡುತ್ತೇವೆ. ಅಲ್ಲಿ ಸ್ಪರ್ಧಿಸಿ ಚುನಾವಣೆಯಲ್ಲಿ ಗೆದ್ದು ತೋರಿಸಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.





