ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ ನಾಯ್ಕಾ
ಚಿಕ್ಕಮಗಳೂರು, ಜೂ.7: ಜಿಲ್ಲೆಯಲ್ಲಿ ಉದ್ಭವಿಸಿರುವ ಕಾರ್ಮಿಕರ ಸಮಸ್ಯೆಗಳನ್ನು ಒಂದು ತಿಂಗಳೊಳಗೆ ಬಗೆಹರಿಸಲು ಪ್ರಾಮಾ ಣಿಕ ಪ್ರಯತ್ನ ಮಾಡುವುದಾಗಿ ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ ನಾಯ್ಕಾ ತಿಳಿಸಿದರು.
ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಚೆೇರಿ ಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಕಾರ್ಮಿಕರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕಾರ್ಮಿಕರ ಸಮಸ್ಯೆಗಳು ಅಧಿಕವಾಗಿದ್ದು, ಅವುಗಳನ್ನು ಉನ್ನತ ಮಟ್ಟದಲ್ಲಿ ಪರಿಶೀಲಿಸಿ ಬಗೆಹರಿಸಲಾಗುವುದು. ಸರಕಾರಿ ಜಾಗದ ಒತ್ತುವರಿದಾರರು ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವು ಗೊಳಿಸಿ ಕಾರ್ಮಿಕರ ಅನುಕೂಲಕ್ಕಾಗಿ ನಿವೇಶನ ಮಾಡಿಕೊಡಲಾಗುವುದು ಎಂದರು.
ಜಿಲ್ಲೆಯ ಸಮಸ್ಯೆಗಳನ್ನು ಮುಖ್ಯಮಂತ್ರಿ ಯವರೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು. ಜಿಲ್ಲೆಯಲ್ಲಿ ಹೈಟೆಕ್ ಕಾರ್ಮಿಕರ ಕಲ್ಯಾಣ ಭವನವನ್ನು ನಿರ್ಮಿಸಲು ಕಾರ್ಮಿಕ ಇಲಾಖೆ ಸಿದ್ಧವಿದೆ. ಆ ಭವನ ನಿರ್ಮಾಣ ಮಾಡಲು ನಗರಾಭಿವೃದ್ಧಿ ಪ್ರಾಧಿಕಾರದಿಂದ 2 ಎಕರೆ ಜಮೀನು ನೀಡಬೇಕೆಂದು ಸಿಡಿಎ ಅಧ್ಯಕ್ಷರನ್ನು ಕೋರಿದ ಅವರು, ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಕಾರ್ಮಿಕರ ಕಟ್ಟಡಕ್ಕೆ ಸುತ್ತಲೂ ಕಾಂಪೌಂಡ್ ನಿರ್ಮಿಸಲಾಗುವುದು. ಕಾರ್ಮಿಕ ಇಲಾಖೆಯಲ್ಲಿರುವ ಸಿಬ್ಬಂದಿ ಕೊರತೆಯನ್ನು ನೀಗಿಸಲಾ ಗುವುದು. ಕಾರ್ಮಿಕರಿಗೆ ಸಂಬಂ ಧಿಸಿದ ಸಮಸ್ಯೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾ ಗುವುದು ಎಂದು ಹೇಳಿದರು.
ಮಾಜಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಮಾತನಾಡಿ, ಜಿಲ್ಲೆಯ ಯುವಕರು ಅನೇಕ ಕಾರಣಗಳಿಂದ ಕೆಲಸ ಅರಸಿಕೊಂಡು ಬೇರೆಡೆಗೆ ವಲಸೆ ಹೋಗುತ್ತಿದ್ದಾರೆ. ವಲಸೆ ಹೋಗದಂತೆ ಕೌಶಲ್ಯಾಭಿವೃದ್ಧಿ ಯೋಜನೆಯನ್ನು ಕಡೂರು ತಾಲೂಕಿಗೆ ಮಂಜೂರು ಮಾಡಬೇಕು. ಜಿಲ್ಲೆಯಲ್ಲಿರುವ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರಿಗೆ ನಿವೃತ್ತಿ ವೇತನವನ್ನು ಕೊಡಬೇಕು. ಸರಕಾರದ ಯೋಜನೆಗಳು ಕಾರ್ಮಿಕರಿಗೆ ಸರಿಯಾಗಿ ತಿಳಿದಿಲ್ಲ. ಅದನ್ನು ಅವರಿಗೆ ತಿಳಿಸುವ ವ್ಯವಸ್ಥೆಯಾಗಬೇಕು. ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆಯನ್ನು ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.
ಕಾರ್ಮಿಕರ ಸಮಸ್ಯೆಗಳ ಬಗ್ಗೆ ಶಿವಾನಂದಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ 2 ಲಕ್ಷ ಕಾರ್ಮಿಕರಿದ್ದಾರೆ. ಕಾಫಿ ತೋದ ಕೆಲಸಕ್ಕೆ ಕಾರ್ಮಿಕರನ್ನು ತೆರೆದ ವಾಹನಗಳಲ್ಲಿ ಕರೆದೊಯ್ಯಲಾಗುತ್ತಿದೆ. ಕಾರ್ಮಿಕರಿಗೆ ಯಾವುದೇ ಭದ್ರತೆ ಇಲ್ಲ. ಕಾರ್ಮಿಕರನ್ನು ಕರೆದುಕೊಂಡು ಹೋಗುವ ವಾಹನಗಳಿಗೆ ಸರಿಯಾದ ವಿಮೆ ಇರುವುದಿಲ್ಲ ಇದನ್ನು ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಡಿ.ಎಲ್. ವಿಜಯಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಮಿಕ ಸಚಿವರು ಪಕ್ಷದ ಸಂಘಟನೆಗೆ ಒತ್ತು ಕೊಟ್ಟಿದ್ದಾರೆ. ಇಲಾಖೆಯ ಸಮಸ್ಯೆ ಸೇರಿದಂತೆ ಜಿಲ್ಲೆಯಲ್ಲಿರುವ ಕಾರ್ಮಿಕ ಸಮಸ್ಯೆಗಳನ್ನು ಬಗೆಹರಿಸಬೇಕು. ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಸ್.ಶಾಂತೇಗೌಡ, ಸಿಡಿಎ ಅಧ್ಯಕ್ಷ ಚಂದ್ರೇಗೌಡ, ಎಪಿಎಂಸಿ ಅಧ್ಯಕ್ಷ ಚಂದ್ರೇಗೌಡ, ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎನ್.ಮಹೇಶ್, ಜಿಪಂ ಸದಸ್ಯ ಮಹೇಶ್ ಒಡೆಯರ್, ರಾಮಚಂದ್ರ ಒಡೆಯರ್ ಮತ್ತಿತರರು ಉಪಸ್ಥಿತರಿದ್ದರು.







