ಗಿಡಮರಗಳನ್ನು ಬೆಳೆಸಿ ಪರಿಸರ ಉಳಿಸಲು ಮುಂದಾಗಿ: ಹಿರಿಗಯ್ಯ
ವನಮಹೋತ್ಸವಕ್ಕೆ ಚಾಲನೆ

ಚಿಕ್ಕಮಗಳೂರು, ಜೂ.9: ಪ್ರತಿಯೊಬ್ಬ ನಾಗರಿಕನು ಸ್ವಯಂ ಪ್ರೇರಣೆಯಿಂದ ಗಿಡಮರಗಳನ್ನು ಬೆಳೆಸುವ ಮೂಲಕ ಪರಿಸರವನ್ನು ಉಳಿಸಲು ಮುಂದಾಗಬೇಕು ಎಂದು ಜಿಪಂ ಸದಸ್ಯ ಹಿರಿಗಯ್ಯ ಕರೆ ನೀಡಿದ್ದಾರೆ.
ಅವರು ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ಆದಿಶಕ್ತಿ ನಗರದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ಪೂರ್ವಿಕರು ಪರಿಸರವನ್ನು ದೇವರೆಂದು ಪೂಜಿಸುತ್ತಿದ್ದರು. ಎಲ್ಲೆಡೆ ಗಿಡಮರಗಳನ್ನು ಬೆಳೆಸುತ್ತಿದ್ದರು. ಇದರಿಂದಾಗಿ ದೇಶದಲ್ಲಿ ಕಾಲಕಾಲಕ್ಕೆ ಮಳೆಯಾಗುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಮರ ಗಿಡಗಳನ್ನು ಕಡಿದು ಕಾಡನ್ನು ನಾಶಗೊಳಿಸಿದ ಪರಿಣಾಮ ಅನಾವೃಷ್ಟಿ ಉಂಟಾಗಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಈಗಲಾದರೂ ನಾಗರಿಕರು ಎಚ್ಚೆತ್ತು, ತಮ್ಮ ಮನೆಗಳ ಮುಂದೆ ಗಿಡಮರಗಳನ್ನು ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.
ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಉತ್ತಮ ಪರಿಸರದ ಅಗತ್ಯತೆ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ವೇದಿಕೆ ಯೊಂದಿಗೆ ಕೈಜೋಡಿಸುವ ಮೂಲಕ ಹಳ್ಳಿಯ ಪರಿಸರವನ್ನು ಉಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರವರ ಹುಟ್ಟುಹಬ್ಬದ ಪ್ರಯುಕ್ತ ಶಾಲೆಯ ವಿದ್ಯಾರ್ಥಿಗಳಿಗೆ ಉಪಾಹಾರ ಮತ್ತು ಸಿಹಿ ವಿತರಿಸಲಾಯಿತು.
ಗ್ರಾಪಂ ಸದಸ್ಯರಾದ ಹನೀಫ್, ವಾಜಿದ್, ಶಿವಕುಮಾರ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಜಯಕುಮಾರ್, ಮುಖ್ಯ ಶಿಕ್ಷಕ ನೀಲಕಂಠಪ್ಪ, ವೇದಿಕೆ ಜಿಲ್ಲಾ ಉಪಾಧ್ಯಕ್ಷ ಕೆಂಪನಹಳ್ಳಿ ಅಶೋಕ್, ತಾಲೂಕು ಉಪಾದ್ಯಕ್ಷ ಆರ್.ಕುಮಾರ್, ನಗರ ಉಪಾಧ್ಯಕ್ಷ ಇರ್ಷಾದ್ ಅಹ್ಮದ್, ವಲಯ ಅರಣ್ಯಾಧಿಕಾರಿ ಅಬ್ದುಲ್ ಅಝೀಝ್ ಮತ್ತಿತರರು ಉಪಸ್ಥಿತರಿದ್ದರು.







