ಕಾಂಗ್ರೆಸ್‌ಗೆ ಮತ ನೀಡಿದ ಜೆಡಿಎಸ್ ಶಾಸಕ ಝಮೀರ್ ಅಹ್ಮದ್ ಖಾನ್

ಬೆಂಗಳೂರು, ಜೂ. 10: ‘ನಮ್ಮ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಸೇರಿದಂತೆ ಯಾರೊಬ್ಬರೂ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿ ಎಂದು ನನಗೆ ಸೂಚಿಸಿಲ್ಲ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ರಿಝ್ವೆನ್ ಅರ್ಶದ್‌ಗೆ ನನ್ನ ಮತ ನೀಡಿದ್ದೇನೆ’ ಎಂದು ಜೆಡಿಎಸ್ ಶಾಸಕ ಬಿ.ಝಡ್.ಝಮೀರ್ ಅಹ್ಮದ್‌ಖಾನ್ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಮೇಲ್ಮನೆ ಚುನಾವಣೆ ಮತದಾನದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ನಲ್ಲಿ ಉದ್ಭವಿಸಿರುವ ಭಿನ್ನಮತಕ್ಕೆ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರೇ ನೇರಹೊಣೆ ಎಂದು ಗಂಭೀರ ಆರೋಪ ಮಾಡಿದರು.
ತಾನು ಸ್ವಾಭಿಮಾನದಿಂದ ಬದುಕುತ್ತಿದ್ದು, ಸ್ವಾಭಿಮಾನದಿಂದ ನನ್ನ ಹಕ್ಕು ಚಲಾಯಿಸಿದ್ದೇನೆ. ಪಕ್ಷದ ವರಿಷ್ಠರೇ ಇಂತಹ ವ್ಯಕ್ತಿಗೆ ಮತ ನೀಡಿ ಎಂದು ಸೂಚನೆ ನೀಡದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ತಾನು ಮತ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಶಾಸಕರಿಗೆ ‘ವಿಪ್’ ಜಾರಿ ಮಾಡಿರುವ ಬಗ್ಗೆ ನನಗೆ ಯಾವುದೇ ಮಾಹಿತಿಯೂ ಇಲ್ಲ ಎಂದ ಝಮೀರ್ ಅಹ್ಮದ್ ಖಾನ್, ಜೆಡಿಎಸ್ ಅಪ್ಪ-ಮಕ್ಕಳ ಪಕ್ಷ ಖಂಡಿತ ಅಲ್ಲ. ಬದಲಿಗೆ ದೇವೇಗೌಡ, ಕುಮಾರಸ್ವಾಮಿ ಹಾಗೂ ರೇವಣ್ಣನವರ ಪಕ್ಷ ಎಂದು ಪರೋಕ್ಷವಾಗಿ ಲೇವಡಿ ಮಾಡಿದರು.
ಉಲ್ಲಂಘಿಸಿದರೆ ಏನು ಮಾಡ್ತಾರೆ: ‘ತಾನು ತನ್ನ ಹಕ್ಕನ್ನು ಚಲಾಯಿಸಿದ್ದು, ಜೆಡಿಎಸ್ ವಿಪ್ ಉಲ್ಲಂಘಿಸಿದರೆ ಏನು ಕ್ರಮ ಕೈಗೊಳ್ಳುತ್ತಾರೆಂದು ನನಗೆ ಗೊತ್ತಿಲ್ಲ ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಇಂದಿಲ್ಲಿ ತಿಳಿಸಿದರು.





