ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡಬೇಡಿ: ನ್ಯಾ. ಆರ್‌ಕೆಜಿಎಂಎಂ ಮಹಾ ಸ್ವಾಮೀಜಿ
ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಮಡಿಕೇರಿ, ಜೂ.12: ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ದುಡಿಸಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದ್ದು, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಪ್ರಯತ್ನಿಸಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಸ್ಟರ್ ಆರ್‌ಕೆಜಿಎಂಎಂ ಮಹಾ ಸ್ವಾಮೀಜಿ ಕರೆ ನೀಡಿದ್ದಾರೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ವಕೀಲರ ಸಂಘ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ, ನಗರಸಭೆ ಮತ್ತು ಒಡಿಪಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯ ಕುರಿತು ಕಾನೂನು ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾ. ಮಾಸ್ಟರ್ ಮಹಾ ಸ್ವಾಮೀಜಿ, 14 ವರ್ಷದೊಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧವಾಗಿದ್ದು, ದುಡಿಸಿಕೊಳ್ಳುವವರು ದಂಡ ಮತ್ತು ಜೈಲು ವಾಸಕ್ಕೆ ಗುರಿಯಾಗಬೇಕಾಗುತ್ತದೆ. ದೇಶದಲ್ಲಿ ಬಾಲ ಕಾರ್ಮಿಕ ವಿರೋಧಿ ಕಾಯ್ದೆ ಜಾರಿಯಲ್ಲಿದ್ದರೂ ಈ ಪದ್ಧತಿ ಚಾಲ್ತಿಯಲ್ಲಿರುವುದು ವಿಷಾದಕರವೆಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.
ಕಾನೂನು ಸೇವಾ ಪ್ರಾಧಿಕಾರ ರಾಜ್ಯ ಮತ್ತು ರಾಷ್ಟ್ರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿ ತಿಂಗಳು ಲೋಕ ಅದಾಲತ್ ನಡೆಸಲಾಗುತ್ತದೆ. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈ ಜೋಡಿಸುವವರು ಕಾನೂನು ವ್ಯಾಪ್ತಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮಹಾಸ್ವಾಮೀಜಿ ಸಲಹೆ ನೀಡಿದರು.
2ನೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ಪವನೇಶ್ ಮಾತನಾಡಿ, ಮಕ್ಕಳಿಗೆ ಶಿಕ್ಷಣ ನೀಡುವುದು ಕಡ್ಡಾಯವಾಗಿದ್ದು, ಈ ನಿಟ್ಟಿನಲ್ಲಿ ಪೋಷಕರು ಗಮನ ಹರಿಸಬೇಕೆಂದು ಕರೆ ನೀಡಿದರು. ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪ್ರತಿಯೊಬ್ಬರು ಪ್ರಯತ್ನಿಸಬೇಕು. ಶಿಕ್ಷಣವನ್ನು ನೀಡಲು ಎಲ್ಲರು ಕೈಜೋಡಿಸಬೇಕೆಂದರು.
ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಮಾತನಾಡಿದರು.
ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಪಣತೊಡಬೇಕೆಂದು ಕರೆ ನೀಡಿದರು.
ಉಪವಿಭಾಗಾಧಿಕಾರಿ ನಂಜುಂಡೇಗೌಡ, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ. ಜೋಸೆಫ್, ಕಾರ್ಮಿಕ ಇಲಾಖೆಯ ಅಧಿಕಾರಿ ಮಹದೇವಸ್ವಾಮಿ, ಓಡಿಪಿ ಸಂಸ್ಥೆಯ ಜಾಯ್ಸೆ ಮಿನೇಜಸ್, ವಕೀಲರಾದ ಕೆ.ಎಂ. ಕುಂಞಿ ಅಬ್ದುಲ್ಲ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.







