‘ಅಕ್ರಮ ಸಕ್ರಮ ಯೋಜನೆಯಡಿ ಹಕ್ಕುಪತ್ರ ನೀಡಿ’

ಮಡಿಕೇರಿ, ಜೂ.15: ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಭಾಗ್ಯಕಲ್ಪಿಸುವುದು, ಅಕ್ರಮ ಸಕ್ರಮ ಯೋಜನೆಯಡಿ ಹಕ್ಕುಪತ್ರ ವಿತರಣೆ ಮಾಡುವುದು, ಸ್ಮಶಾನ ಭೂಮಿ ಹಂಚಿಕೆ, ಮತ್ತಿತರ ಸಂಬಂಧ ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಸಮಿತಿ ಸದಸ್ಯ ವೀರಭದ್ರಯ್ಯ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಆಲಿಸಲು ತಾಲೂಕು ಮಟ್ಟದಲ್ಲಿ ತಹಶೀಲ್ದಾರರು ಹಾಗೂ ಉಪ ಪೊಲೀಸ್ ವರಿಷ್ಠಾಧಿಕಾರಿಯವರ ಉಪಸ್ಥಿತಿಯಲ್ಲಿ ಸಭೆ ನಡೆಸಬೇಕು ಎಂದರು.
ತಾಲೂಕು ಮಟ್ಟದಲ್ಲಿ ಸಭೆಯನ್ನು ಏರ್ಪಡಿಸಿದಾಗ ಕುಂದುಕೊರತೆ ಹೇಳಿಕೊಳ್ಳಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ವೀರಭದ್ರಯ್ಯ ಒತ್ತಾಯಿಸಿದರು.
ಸಂವಿಧಾನ ಶಿಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ರಾಷ್ಟ್ರದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಇದುವರೆಗೆ ಕಾರ್ಯಗತವಾಗಿ
ಲ್ಲ. ಆದ್ದರಿಂದ ಜಾಗ ಗುರುತಿಸಿ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ ತಾಲೂಕು ಮಟ್ಟದಲ್ಲಿಯೂ ಕುಂದುಕೊರತೆ ಸಭೆ ನಡೆಸಲಾಗುವುದು ಎಂದು ಹೇಳಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ ಅವರು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ನಡವಳಿಯ ಅನುಪಾಲನ ವರದಿಯನ್ನು ಸಭೆಯ ಗಮನಕ್ಕೆ ತಂದರು. ಸಮಿತಿ ಸದಸ್ಯ ಮುತ್ತಪ್ಪ ಮಾತನಾಡಿ, ಸೋಮವಾರಪೇಟೆಯಲ್ಲಿ ಅಂಬೇಡ್ಕರ್ ಭವನ ಅರ್ಧಕ್ಕೆ ನಿಂತಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಮನವಿ ಮಾಡಿದರು. ಬಳಿಕ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಅನುದಾನ ಪ್ರಗತಿ ಸಂಬಂಧ ಮಾಹಿತಿ ಪಡೆಯಲಾಯಿತು. ಸಮಿತಿ ಸದಸ್ಯರಾದ ರಾಮು, ಎಂ.ಬಿ.ಜೋಯಪ್ಪ, ಸುಕುಮಾರ್, ಜಾಯ್ಸೆ ಮೆನೇಜಸ್, ಪಳನಿ ಪ್ರಕಾಶ್, ಪೌರಾಯುಕ್ತೆ ಬಿ.ಬಿ.ಪುಷ್ಪಾವತಿ, ತಹಶೀಲ್ದಾರರಾದ ಶಿವಪ್ಪ, ಕುಂಞಮ್ಮ, ಪಪಂ ಮುಖ್ಯಾಧಿಕಾರಿಗಳಾದ ಕೃಷ್ಣ ಪ್ರಸಾದ್ ಮತ್ತಿತರರು ಹಲವು ಮಾಹಿತಿ ನೀಡಿದರು.







