ಆರೋಗ್ಯ ಅಭಿಯಾನಕ್ಕೆ ಖಾದರ್ ಚಾಲನೆ

ಬೆಂಗಳೂರು, ಜೂ. 16: ಬೆಂಗಳೂರಿನಲ್ಲಿ ಸಿಲಿಕಾನ್ ಸಿಟಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಜಂಟಿಯಾಗಿ ಹಮ್ಮಿಕೊಂಡಿರುವ ಆರೋಗ್ಯ ಅಭಿಯಾನಕ್ಕೆ ಆರೋಗ್ಯ ಸಚಿವ ಯು.ಟಿ.ಖಾದರ್ ಚಾಲನೆ ನೀಡಿದರು.
ಗುರುವಾರ ನಗರದ ಇಲ್ಲಿನ ಸಿದ್ದಾಪುರ ವಾರ್ಡ್‌ನಲ್ಲಿರುವ ಬಿಬಿಎಂಪಿ ಆರೋಗ್ಯ ಕೇಂದ್ರದ ಸಮೀಪದ ಕೆ.ಎಂ.ಕಾಲನಿ ಕೊಳಗೇರಿ ಪ್ರದೇಶದಲ್ಲಿರುವ ನಾಲೆಗಳಿಗೆ ಔಷಧಿ ಸಿಂಪಡಿಸುವ ಮೂಲಕ ಅಭಿಯಾನಕ್ಕೆ ಅವರು ಚಾಲನೆ ನೀಡಿ, ಎಲ್ಲರೂ ಸ್ವಚ್ಛತೆ ಕಡೆ ಹೆಚ್ಚು ಗಮನ ನೀಡುವಂತೆ ಸ್ಥಳೀಯರಿಗೆ ಮನವಿ ಮಾಡಿದರು.
ನಗರ ಪ್ರದೇಶದಲ್ಲಿ ಮಳೆ ಸುರಿದು ನೀರು ಎಲ್ಲೆಡೆ ನಿಂತರೆ, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ. ಹೀಗಾಗಿ, ನಾಗರಿಕರು ತಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದ ಅವರು, ಬಿಬಿಎಂಪಿ ವ್ಯಾಪ್ತಿಯ ಕೊಳಗೇರಿ ಪ್ರದೇಶಗಳಲ್ಲಿ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿದ್ದು, ಪ್ರತಿಯೊಬ್ಬರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ಹೇಳಿದರು.
ಮೇಯರ್ ಮಂಜುನಾಥರೆಡ್ಡಿ ಮಾತನಾಡಿ, ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಹೀಗಾಗಿ, ಮಳೆನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕೆಂದು ನುಡಿದರು.
ಅಭಿಯಾನ ಕಾರ್ಯಕ್ರಮದಲ್ಲಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮುಜಾಹಿದ್ ಪಾಷ, ಪಾಲಿಕೆ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಸೇರಿ ಪ್ರಮುಖರು ಹಾಜರಿದ್ದರು.





