ಪ್ರಾಧಿಕಾರದೊಂದಿಗೆ ಕೈಜೋಡಿಸಲು ವಿವಿಧ ಇಲಾಖೆಗಳಿಗೆ ಕರೆ
ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಭೆ

ಮಡಿಕೇರಿ, ಜೂ.17: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ವಿವಿಧ ಇಲಾಖೆಗಳೊಂದಿಗೆ ಜೊತೆಗೂಡಿ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ಧೇಶಿಸಿದ್ದು, ತಮ್ಮ ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ನಡೆಯುವ ಕಾರ್ಯಕ್ರಮದ ಸಂದರ್ಭ ಪ್ರಾಧಿಕಾರದೊಂದಿಗೆ ಕೈಜೋಡಿಸುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್‌ಕೆಜಿಎಂಎಂ ಮಹಾಸ್ವಾಮೀಜಿ ಕರೆ ನೀಡಿದ್ದಾರೆ.
ನಗರದಲ್ಲಿ ನಡೆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದ್ವೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜು.9ರಂದು ವಿದ್ಯುತ್‌ಚ್ಛಕ್ತಿ, ಕುಡಿಯುವ ನೀರು, ದೂರವಾಣಿ, ಸಾರ್ವಜನಿಕ ಉಪಯುಕ್ತ ಸೇವೆಗಳು ಮತ್ತಿತರ ವಿಚಾರಗಳ ಕುರಿತು ಮಾಸಿಕ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದರು. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಜನತಾ ನ್ಯಾಯಾಲಯ ಉತ್ತಮ ವೇದಿಕೆಯಾಗಿದೆ. ಆ ನಿಟ್ಟಿನಲ್ಲಿ ಬಹಳ ವರ್ಷಗಳ ಕಾಲ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿದೆ ಎಂದು ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೇಳಿದರು. ಪಕ್ಷಕಾರರು ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ನೀಡುವುದು, ಸೌಹಾರ್ದಯುತವಾಗಿ ಪ್ರಕರಣ ಇತ್ಯರ್ಥಗೊಳ್ಳುವುದರಿಂದ ಬಾಂಧವ್ಯ ಹೆಚ್ಚುತ್ತದೆ. ಜನತಾ ನ್ಯಾಯಾಲಯಗಳಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳುವುದು, ಕಡಿಮೆ ಖರ್ಚು, ಮಾನಸಿಕ ನೆಮ್ಮದಿ, ಶೀಘ್ರ ವಿಲೇವಾರಿಗೆ ಒಳ್ಳೆಯ ಅವಕಾಶವಾಗಿದೆ. ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು ಭೂಸ್ವಾಧೀನ ಪ್ರಕರಣಗಳು, ಸ್ಥಳೀಯ ಸಂಸ್ಥೆಗಳ ಪ್ರಕರಣಗಳು, ಸಂಸ್ಥೆಗಳಲ್ಲಿ ದಾಖಲಾದ ಪ್ರಕರಣಗಳು, ಬ್ಯಾಂಕ್‌ಗಳು ಜೀವನಾಂಶ, ಕ್ರಿಮಿನಲ್, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳು ಜನತಾ ನ್ಯಾಯಾಲಯದ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಆರ್‌ಕೆಜಿಎಂಎಂ ಮಹಾಸ್ವಾಮೀಜಿ ತಿಳಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಮಾತನಾಡಿ, ವಿವಿಧ ಇಲಾಖೆಗಳ ಸಹಕಾರದಲ್ಲಿ ಕಾನೂನು ಅರಿವು, ನೆರವು ಶಿಬಿರ ಏರ್ಪಡಿಸುವುದು, ಪರಿಸರ, ಸ್ವಚ್ಛತೆ ಮತ್ತಿತರ ಕಾರ್ಯಕ್ರಮಗಳ ಆಯೋಜನೆ ಮಾಡುವ ಬಗ್ಗೆ ಮಾಹಿತಿ ನೀಡಿದರು. ಒಂದನೇ ಅಪರ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಸಿ.ಶ್ರೀಕಾಂತ್, ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ಅನ್ನಪೂರ್ಣೇಶ್ವರಿ, ಅಪರ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ರಮೇಶ್ ಬಾಬು, ವಕೀಲರ ಸಂಘದ ಅಧ್ಯಕ್ಷ ಸಿ.ಟಿ.ಜೋಸೆಫ್, ಸರಕಾರಿ ವಕೀಲ ಶ್ರೀಧರ್ ನಾಯರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಾಯಾದೇವಿ ಗಲಗಲಿ, ತಾಲೂಕು ವೈದ್ಯಾಧಿಕಾರಿ ಡಾ. ರವಿಕುಮಾರ್, ಡಿವೈಎಸ್ಪಿ ಕುಮಾರ್ ಚಂದ್ರ, ನಗರಸಭೆಯ ಸ್ವಚ್ಛತಾ ಅಧಿಕಾರಿ ನೀಲಾಧರ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಮೋದ್, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಚಿತ್ರಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ದಮಯಂತಿ, ಜಿಲ್ಲಾ ಕಾರಾಗೃಹ ಅಧೀಕ್ಷಕರು, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
ಕಾನೂನು ಅರಿವು ಶಿಬಿರ:
ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಕಾನೂನು ಅರಿವು ಶಿಬಿರ ಏರ್ಪಡಿಸುವ ಕುರಿತು ಸಮಾಲೋಚನೆ ನಡೆಯಿತು. ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ನಿಷೇಧ ಬಗ್ಗೆ ಅರಿವು ಮೂಡಿಸುವುದು. ಜೈಲಿನಲ್ಲಿ ಕೈದಿಗಳಿಗೆ ಮನವರಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವುದು, ಮಹಿಳೆಯರು, ಮಕ್ಕಳು, ವಿಕಲಚೇತನರು ಮತ್ತಿತರರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವುದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸರಕಾರದ ಸೌಲಭ್ಯಗಳ ಬಗ್ಗೆ ಜಾಗೃತಿ ಉಂಟುಮಾಡುವುದು ಮತ್ತಿತರ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.







