ಮಂಗಳೂರು: ಜೂನ್ 16ರಿಂದ 22ರವರೆಗೆ ವಿಶೇಷ ಸ್ವಚ್ಛತಾ ಸಪ್ತಾಹ ಅಭಿಯಾನ
ಮಂಗಳೂರು, ಜೂ.18: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಮಲೇರಿಯಾ, ಚಿಕೂನ್ ಗುನ್ಯಾದಂತಹ ಸಾಂಕ್ರಾಮಿಕ ರೋಗಗಳಿಗೆ ನಿಯಂತ್ರಣ ತರುವ ನಿಟ್ಟಿನಲ್ಲಿ ಜೂನ್ 16ರಿಂದ 22ರವರೆಗೆ ವಿಶೇಷ ಸ್ವಚ್ಛತಾ ಸಪ್ತಾಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ನೋಡೆಲ್ ಅಧಿಕಾರಿ ಡಾ.ರಾಜ್‌ಕುಮಾರ್ ತಿಳಿಸಿದರು. ದಕ್ಷಿಣ ಕಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಸ್ವಚ್ಛತಾ ಸಸ್ತಾಹ ಈಗಾಗಲೇ ಆರಂಭವಾಗಿದ್ದು, ನಿರ್ಮಾಣ ಹಂತದ ಕಟ್ಟಡಗಳಿಗೆ, ಕೊಳಚೆ ಪ್ರದೇಶಗಳಿಗೆ ಭೇಟಿ ನೀಡಿದ್ದು, ಅಲ್ಲಿ ಸೊಳ್ಳೆ ಉತ್ಪತ್ತಿಯಾಗುವ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗಿದೆ. ಸಾರ್ವಜನಿಕರಿಗೆ ಪರಿಸರ ನೈರ್ಮಲ್ಯ, ವೈಯಕ್ತಿಕ ಸ್ವಚ್ಛತೆ, ಘನತ್ಯಾಜ್ಯ ವಿಲೇವಾರಿ ಮಾಡುವುದರ ಬಗ್ಗೆ ಮಾಹಿತಿ ನೀಡಿ ಅವರಿಗೆ ಎಚ್ಚರದಿಂದ ಇರಿಸಲು ತಿಳಿಸಲಾಗಿದೆ ಎಂದು ತಿಳಿಸಿದರು. ಮಂಗಳೂರು ನಗರ ವ್ಯಾಪ್ತಿಯಲ್ಲಿ ಈಗಾಗಲೇ 350 ನಿರ್ಮಾಣ ಹಂತದ ಕಟ್ಟಡಗಳನ್ನು ಗುರುತಿಸಿ, 50 ಕಟ್ಟಡಗಳ ತಪಾಸಣೆ ನಡೆಸಿ ಅರಿವು ಮೂಡಿಸಲಾಗಿದೆ. ಜನ ವಸತಿಯಿರುವ ಸ್ಥಳಗಳಲ್ಲಿ ಹೆಚ್ಚು ಅರಿವು ಮೂಡಿಸುವ ಅಗತ್ಯವಿದೆ. ಶಿಕ್ಷಣ ಸಂಸ್ಥೆಗಳು ಮತ್ತು ಹೋಟೆಲ್‌ಗಳು, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಪ್ರದೇಶಗಳು, ಆಸ್ಪತ್ರೆ, ಕಾರ್ಖಾನೆ ಪ್ರದೇಶಗಳಲ್ಲಿ ಸ್ವಚ್ಛತಾ ಸಪ್ತಾಹವನ್ನು ನಡೆಸಲಾಗುವುದು. ಟಯರ್, ಟ್ಯೂಬ್, ಸಿಯಾಳ, ಪ್ಲಾಸ್ಟಿಕ್ ವಸ್ತುಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ ಎಂದು ಅವರು ಹೇಳಿದರು.
ಕಳೆದ 3 ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣ ಕಡಿಮೆಯಾಗಿದೆ. ವರ್ಷದಿಂದ ವರ್ಷಕ್ಕೆ ಮಲೇರಿಯಾ ಪ್ರಕರಣದಲ್ಲಿ ಕುಸಿತವಾಗುತ್ತಿರುವುದು ದಾಖಲಾಗಿದೆ. ಕಳೆದ ವರ್ಷ ಜನವರಿಯಿಂದ ಜೂನ್ ಮಧ್ಯಭಾಗದವರೆಗೆ 1986 ಮಲೇರಿಯಾ ಪ್ರಕರಣಗಳು ದಾಖಲಾಗಿದ್ದು, ಈ ಬಾರಿ 1786 ಮಲೇರಿಯಾ ಪ್ರಕರಣಗಳು ದಾಖಲಾಗಿದೆ. ಮಲೇರಿಯಾ ಪ್ರಕರಣಗಳಲ್ಲಿ ಇಳಿಮುಖವಾಗುತ್ತಿದ್ದಂತೆ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಕಳೆದ ಬಾರಿ 49 ಪ್ರಕರಣ ದಾಖಲು ಆಗಿದ್ದರೆ ಈ ಬಾರಿ 225 ಪ್ರಕರಣಗಳು ದಾಖಲಾಗಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿಕಂದರ್ ಪಾಷಾ ಉಪಸ್ಥಿತರಿದ್ದರು.







