ಘನ ತ್ಯಾಜ್ಯ ನಿರ್ವಹಣೆ: ಉಪ್ಪಿನಂಗಡಿ ಗ್ರಾಮ ಪಂಚಾಯತ್‌ಗೆ ಪ್ರಶಸ್ತಿ
ವಿಶ್ವ ಪರಿಸರ ದಿನಾಚರಣೆ ಸಮಾರಂಭದಲ್ಲಿ ಸಚಿವರಿಂದ ಪ್ರಶಸ್ತಿ ಪ್ರಧಾನ

ಉಪ್ಪಿನಂಗಡಿ,ಜೂ.18: ಜಿಲ್ಲಾಡಳಿತ ದ.ಕ. ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ನೆನಪಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿದ್ದಕ್ಕಾಗಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಪ್ರಶಸ್ತಿ ಪಡೆದುಕೊಂಡಿದೆ.
ಜೂ. 17ರಂದು ಮಂಗಳೂರುನಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಸಮಾರಂಭದಲ್ಲಿ ಅರಣ್ಯ ಸಚಿವ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಪ್ರಶಸ್ತಿ ಪ್ರಧಾನ ಮಾಡಿದರು. ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಅಸಫ್, ಪಂಚಾಯಿತಿ ಸದಸ್ಯ ಯು.ಟಿ. ತೌಶೀಫ್ ಪ್ರಶಸ್ತಿ ಸ್ವೀಕರಿಸಿದರು.
ಮಂಗಳೂರು ದಕ್ಷಿಣ ಶಾಸಕ ಜೆ.ಆರ್. ಲೋಬೋ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಶಾಸಕ ಮೊದಿನ್ ಬಾವಾ, ಮಹಾನಗರ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಕವಿತಾ ಸನಿಲ್, ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ಜಿಲ್ಲಾ ಮುಖ್ಯ ಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ ಸಂಜಯ್ ಬಿಜೂರ್, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾವೇರಿಯಪ್ಪ, ಮುಖ್ಯ ಪರಿಸರ ಅಧಿಕಾರಿ ಎಸ್. ನಂದಕುಮಾರ್ ಮೊದಲಾದ ಅಧಿಕಾರಿಗಳು ಉಪಸ್ಥಿತರಿದ್ದರು.







