ಸಾಮಾಜಿಕ ಜಾಲತಾಣದೆಡೆ ವಿಶೇಷ ನಿಗಾ: ಐಜಿಪಿ ಅರುಣ ಚಕ್ರವರ್ತಿ

ಕಾರವಾರ, ಜೂ.21: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅಕ್ರಮಗಳ ಮೇಲೆ ವಿಶೇಷ ನಿಗಾ ವಹಿಸಲಾಗುತ್ತಿದೆ ಎಂದು ಪಶ್ಚಿಮ ವಲಯ ಐಜಿಪಿ ಅರುಣ ಚಕ್ರವರ್ತಿ ತಿಳಿಸಿದ್ದಾರೆ.
ಕಾರವಾರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಕ್ರಾಂತಿಕಾರಿ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹರಿದಾಡುತ್ತಿರುವ ಆರೋಪಗಳು ಕೇಳಿ ಬಂದಿವೆ. ಇತ್ತೀಚೆಗೆ ಸಮಾಜದ ಶಾಂತಿ ಕೆಡಿಸುವ ಸಂದೇಶ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿ ರುವುದು ಸಮಾಜಕ್ಕೆ ಮಾರಕ ಎಂದರು.
ಕೆಲವರು ಇಂಥ ಸಂದೇಶಗಳ ಮೂಲಕ ಕೋಮು ಗಲಭೆಗಳಿಗೆ ಪ್ರಚೋದಿಸುವ ಕಾರ್ಯ ಮಾಡುತ್ತಿದ್ದಾರೆ. ಅಂತವರ ಕುತಂತ್ರಗಳನ್ನು ವಿಫಲವಾಗಿಸಲು ವಿಶೇಷ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಾಮಾಜಿಕ ತಾಣಗಳಲ್ಲಿ ಬರುವ ವದಂತಿಗಳಿಗೆ ಸಾರ್ವಜನಿಕರು ಕಿವಿ ಕೊಡಬಾರದು. ಭಟ್ಕಳದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನಾ ಕೃತ್ಯಗಳನ್ನು ತಡೆಯಲು ಸಾಮಾಜಿಕ ಜಾಲತಾಣಗಳ ಮೇಲೆ ವಿಶೇಷ ನಿಗಾ ಇರಿಸಲಾಗಿದ್ದು, ಸಮೀಪದಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆ ತೆರೆಯಲಾಗುವುದು ಎಂದರು.
ಭಟ್ಕಳದಲ್ಲಿ ಕೋಮು ಗಲಭೆ ಪ್ರಕರಣಗಳು ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಬೀಟ್ ವ್ಯವಸ್ಥೆ ಜಾರಿಗೆ ತರಲಾಗುವುದು. ಮಾದಕದ್ರವ್ಯ ಹಾವಳಿ ಸೇರಿದಂತೆ ಇನ್ನಿತರ ಸಾಮಾಜಿಕ ಅಪರಾಧ ತೊಡಕುಗಳ ನಿವಾರಣೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಪರಾಧ ಮುಕ್ತ ಸಮಾಜ ನಿರ್ಮಿಸಲು ಪೊಲೀಸ್ ಇಲಾಖೆ ಶ್ರಮಿಸುತ್ತಿದೆ ಎಂದರು.







