ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವೆ: ದಿನೇಶ್ ಗುಂಡೂರಾವ್
ಕೆಪಿಸಿಸಿ ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ

ಬೆಂಗಳೂರು, ಜೂ. 22: ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟು ದೊಡ್ಡ ಜವಾಬ್ದಾರಿಯನ್ನು ನೀಡಿದ್ದು, ಅದನ್ನು ತಾನು ಅತ್ಯಂತ ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ದಿನೇಶ್ ಗುಂಡೂರಾವ್ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.
ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನೂತನ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತನಾದ ನನಗೆ ವಿವಿಧ ಹಂತದಲ್ಲಿ ಪಕ್ಷ ಸಂಘಟಿಸುವ ಹೊಣೆಗಾರಿಕೆಯನ್ನು ಹಿರಿಯರು ವಹಿಸಿದ್ದಾರೆ. ಪಕ್ಷ ಸಂಘಟನೆಗೆ ಒತ್ತು ನೀಡುವ ಮೂಲಕ ವರಿಷ್ಠರ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದು ನುಡಿದರು.
ತಾನು ಹಿರಿಯ ನಾಯಕನೂ ಅಲ್ಲ. ಇತ್ತ ಕಿರಿಯನೂ ಅಲ್ಲ. ಒಂದು ರೀತಿಯಲ್ಲಿ ಮಧ್ಯಮ ನಾಯಕನಿದ್ದಂತೆ. ಹೀಗಾಗಿ ಹಿರಿಯರು ಮತ್ತು ಕಿರಿಯರ ನಡುವೆ ಸೇತುವೆ ಆಗಿ ಕೆಲಸ ಮಾಡುತ್ತೇನೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಈ ಹಿಂದೆ ನನಗೆ ಯುವ ಕಾಂಗ್ರೆಸ್ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಇದೀಗ ಕಾರ್ಯಾಧ್ಯಕ್ಷ ಸ್ಥಾನದ ಹೊಣೆಗಾರಿಕೆ ನೀಡಿದ್ದಾರೆ ಎಂದು ಸ್ಮರಿಸಿದರು.
ಸಚಿವ ಸಂಪುಟ ಪುನಾಚರನೆ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಸೃಷ್ಟಿಯಾಗಿರುವ ಅತೃಪ್ತಿ, ಅಸಮಾಧಾನ ನಿವಾರಣೆಗೆ ಸಿಎಂ ಸಿದ್ಧರಾಮಯ್ಯ, ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಸೇರಿದಂತೆ ಹಲವು ನಾಯಕರು ಶ್ರಮಿಸುತ್ತಿದ್ದಾರೆಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಸಂಪುಟದಿಂದ ಕೈಬಿಟ್ಟದ್ದರಿಂದ ಕೆಲವರಿಗೆ ನೋವು ಆಗುವುದು ಸಹಜ. ಮಂತ್ರಿ ಪರಿಷತ್ ಸಭೆಯಲ್ಲಿ ಸಿಎಂ ಎಲ್ಲರಿಗೂ ಬೇರೆಯವರಿಗೆ ಅವಕಾಶ ಮಾಡಿಕೊಡಿ ಎಂದಿದ್ದರು. ಶೀಘ್ರದಲ್ಲೇ ಎಲ್ಲವೂ ಸರಿಯಾಗಲಿಎಂದು ದಿನೇಶ್ ಗುಂಡೂರಾವ್ ಹೇಳಿದರು.





