ಗಣಪತಿ ಆತ್ಮಹತ್ಯೆ ತನಿಖೆ ಸಿಐಡಿಗೆ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜು. 8: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದು, ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈಗಾಗಲೇ ಪ್ರಕರಣ ಸಿಐಡಿಗೆ ವಹಿಸಿದ್ದು, ತನಿಖಾ ವರದಿ ಬಂದ ಬಳಿಕ ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಗಣಪತಿ ಆತ್ಮಹತ್ಯೆಗೆ ಮುನ್ನ ಕೆಲವರ ಹೆಸರನ್ನು ಪ್ರಸ್ತಾಪಿಸಿದ್ದು, ಆ ಬಗ್ಗೆ ಸತ್ಯಾಸತ್ಯತೆ ಹೊರಬರಬೇಕೆಂಬ ಕಾರಣಕ್ಕಾಗಿಯೇ ತನಿಖೆಗೆ ಆದೇಶಿಸಲಾಗಿದೆ. ಎಲ್ಲ ಪ್ರಶ್ನೆಗಳಿಗೆ ಹಾಗೂ ಅನುಮಾನಗಳಿಗೆ ಸಿಐಡಿ ತನಿಖೆಯಿಂದ ಉತ್ತರ ದೊರೆಯಲಿದೆ ಎಂದು ಸಿದ್ದರಾಮಯ್ಯ ನುಡಿದರು.
ತನಿಖೆ ಪೂರ್ಣಗೊಳ್ಳುವವರೆಗೂ ಯಾರೊಬ್ಬರ ಮೇಲೆಯೂ ಸಂದೇಶ ಸರಿಯಲ್ಲ. ತನಿಖಾ ವರದಿ ಬಂದ ಬಳಿಕ ತಪ್ಪಿತಸ್ಥರು ಎಷ್ಟೇ ದೊಡ್ಡವರು ಇದ್ದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ, ಸಚಿವ ಜಾರ್ಜ್ ಹೆಸರು ಉಲ್ಲೇಖದ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಬಿಜೆಪಿ ಗಣಪತಿ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಬಿಜೆಪಿಯವರಿಗೆ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸುವ ನೈತಿಕತೆಯೇ ಇಲ್ಲ ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ವಾಗ್ದಾಳಿ ನಡೆಸಿದರು.







