ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆಗೆ ವಿಪಕ್ಷಗಳೇ ಕಾರಣ: ಪರಮೇಶ್ವರ್

ಬೆಂಗಳೂರು, ಜು. 10: ‘ಡಿವೈಎಸ್ಪಿಗಳಾದ ಎಂ.ಕೆ.ಗಣಪತಿ, ಕಲ್ಲಪ್ಪ ಹಂಡಿಭಾಗ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ನಿಗೂಢ ಆತ್ಮಹತ್ಯೆಗಳಿಗೆ ವಿರೋಧ ಪಕ್ಷಗಳೆ ಕಾರಣವೆ ಹೊರತು ಆಡಳಿತಾರೂಢ ಕಾಂಗ್ರೆಸ್ ಸರಕಾರವಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.
ರವಿವಾರ ರೇಸ್‌ಕೋರ್ಸ್ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ನೂತನ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಣ್ಣ-ಪುಟ್ಟ ವಿಚಾರಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದು, ಅವರ ಆಟ ಯಾವುದೇ ಕಾರಣಕ್ಕೂ ಫಲಲಿಸುವುದಿಲ್ಲ ಎಂದು ತಿರುಗೇಟು ನೀಡಿದರು.
ಬಿಜೆಪಿ ಹಾಗೂ ಜೆಡಿಎಸ್ ರಾಜ್ಯದಲ್ಲಿ ಅಧಿಕಾರದಲ್ಲಿ ಸಂದರ್ಭದಲ್ಲಿ ಏನೇನು ಮಾಡಿದ್ದಾರೆಂದು ಎಲ್ಲರಿಗೂ ಗೊತ್ತು. ಅವರ ಕಾಲದಲ್ಲಿ ಅಧಿಕಾರಗಳ ಮೇಲೆ ಒತ್ತಡವಿತ್ತು. ಆ ಹಿನ್ನೆಲೆಯಲ್ಲಿ ಈಗ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯ ಸರಕಾರ ಕಾರಣವಲ್ಲ ಎಂದು ಪರಮೇಶ್ವರ್ ಸ್ಪಷ್ಟಣೆ ನೀಡಿದರು.
ಶಿಸ್ತು ಕ್ರಮ: ರಾಜ್ಯ ಸರಕಾರ, ಪಕ್ಷ ಹಾಗೂ ಪಕ್ಷದ ಮುಖಂಡರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುವ ಹಿರಿಯ ಮುಖಂಡರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಪರಮೇಶ್ವರ್, ಅಸಮಾಧಾನವಿದ್ದರೆ ಪಕ್ಷದ ವೇದಿಕೆಯಲ್ಲೆ ಚರ್ಚಿಸಿ ಎಂದು ಸಲಹೆ ಮಾಡಿದರು.
ಅಧಿಕಾರಕ್ಕೆ ಬರುವುದು ನಿಶ್ವಿತ: ರಾಜ್ಯ ಸರಕಾರ ನುಡಿದಂತೆ ನಡೆದಿದ್ದು, ಮುಂದೆಯೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದೆ. ಆ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಪರಮೇಶ್ವರ್ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
ಭಾರತ ದೇಶವನ್ನು ಕಾಂಗ್ರೆಸ್ ಮುಕ್ತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸೂರ್ಯ-ಚಂದ್ರ ಇರುವವರೆಗೂ ದೇಶದಲ್ಲಿ ಕಾಂಗ್ರೆಸ್ ಪಕ್ಷ ಇರುತ್ತದೆ ಎಂದು ಗುಡುಗಿದ ಪರಮೇಶ್ವರ್, ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆಂಬುದು ಬಿಜೆಪಿಯವರ ಭ್ರಮೆ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.
ನೂತನ ಕಾರ್ಯಾಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರು ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದ ಅವರು, ಸಚಿವರಾಗಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿರುವ ಅವರು, ಪಕ್ಷ ಸಂಘಟನೆಗೆ ಆಸ್ಥೆ ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ನೂತನ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಂದ ಕಾಂಗ್ರೆಸ್ ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಕಾರ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಪುತ್ರನ ಅಧಿಕಾರ ಸ್ವೀಕಾರವನ್ನು ಕಣ್ತುಂಬಿಕೊಳ್ಳಲು ದಿನೇಶ್ ಗುಂಡೂರಾವ್ ಅವರ ತಾಯಿ ವರಲಕ್ಷ್ಮಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ಸಿ.ಕೆ.ಜಾಫರ್ ಶರೀಫ್, ಎಐಸಿಸಿ ಕಾರ್ಯದರ್ಶಿ ಚೆಲ್ಲ ಕುಮಾರ್, ಹನುಮಂತರಾವ್, ಸಚಿವರಾದ ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಡಾ.ಮಹದೇವಪ್ಪ, ಮಹದೇವ ಪ್ರಸಾದ್, ಜಯಚಂದ್ರ, ಮೋಟಮ್ಮ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಸಮಾರಂಭದಲ್ಲಿ ಹಾಜರಿದ್ದರು.







