ಜು. 16ರಂದು ಕಾಂಗ್ರೆಸ್ನ ಹಿರಿಯ ನಾಯಕರು ಮಂಗಳೂರಿಗೆ
ಮಂಗಳೂರು, ಜು. 15: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮಂಗಳೂರು ದಕ್ಷಿಣ ಬ್ಲಾಕ್ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಬ್ಲಾಕ್ ಮಟ್ಟದ ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶವು ಜು.16ರಂದು ಬೆಳಗ್ಗೆ 10 ಗಂಟೆಗೆ ನಗರದ ಪುರಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕಾಂಗ್ರೆಸ್ ಲೋಕಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್, ಕೇಂದ್ರದ ಮಾಜಿ ಸಚಿವರಾದ ಆಸ್ಕರ್ ಫೆರ್ನಾಂಡಿಸ್, ಜನಾರ್ದನ ಪೂಜಾರಿ, ವೀರಪ್ಪ ಮೊಯ್ಲಿ, ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಯು.ಟಿ.ಖಾದರ್, ಮುಖ್ಯ ಸಚೇತಕ ಐವನ್ ಡಿಸೋಜ, ಮಾಜಿ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಮೇಯರ್ ಹರಿನಾಥ್ ಸಹಿತ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಹಾಗೂ ಹಿರಿಯ ಮುಖಂಡರು ಭಾಗವಸಲಿದ್ದಾರೆ.
ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್. ಲೋಬೊ ಪ್ರಕಟನೆಯಲ್ಲಿ ತಿಳಿಸಿದ್ದಾರೆ.