ಕಡಬ ಸಮುದಾಯ ಆಸ್ಪತ್ರೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಭೇಟಿ

ಕಡಬ, ಜು.19: ಮೂಲಭೂತ ಸೌಕರ್ಯ ವಂಚಿತ ಕಡಬ ಸಮುದಾಯ ಆಸ್ಪತ್ರೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಆಸ್ಪತ್ರೆಯಲ್ಲಿನ ಕುಂದುಕೊರತೆ ಹಾಗೂ ಶುಚಿತ್ವದ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ದಿಢೀರ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮೀನಾಕ್ಷಿ ಶಾಂತಿಗೋಡು, ಆಸ್ಪತ್ರೆಯಲ್ಲಿ ಸಿಬ್ಬಂದಿಯ ಕೊರತೆ ಎದ್ದು ಕಾಣುತ್ತಿದೆ. ಶುಚಿತ್ವದ ಕಡೆಗೂ ಗಮನ ಹರಿಸಿದಂತೆ ಕಾಣುವುದಿಲ್ಲ. ಕಡಬ ಪರಿಸರದ ಪ್ರಮುಖ ಆಸ್ಪತ್ರೆಯಾದ ಸಮುದಾಯ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿಯವರ ಜತೆ ಚರ್ಚಿಸಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜನೆ ಮಾಡಲು ಪ್ರಯತ್ನಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷೆ ಭವಾನಿ ಚಿದಾನಂದ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಅರುಣ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಪುಲಸ್ತ್ಯಾ ರೈ, ಕಡಬ ಸಿ.ಎ.ಬ್ಯಾಂಕ್ ಅಧ್ಯಕ್ಷ ಸುಂದರ ಗೌಡ ಮಂಡೆಕರ, ಪ್ರಮುಖರಾದ ಸೀತಾರಾಮ ಗೌಡ ಪೊಸವಳಿಕೆ, ಸತೀಶ್ ನಾಕ್, ರಮೇಶ್ ಕಲ್ಪುರೆ, ಶಿವಪ್ರಸಾದ್ ರೈ ಮೈಲೇರಿ ಮೊದಲಾದವರು ಉಪಸ್ಥಿತರಿದ್ದರು.





