ಕಲ್ಲಪ್ಪ ಆತ್ಮಹತ್ಯೆ ಪ್ರಕರಣದಲ್ಲಿ ಬಜರಂಗ ದಳ: ಪರಮೇಶ್ವರ್
ಬೆಂಗಳೂರು, ಜು.19: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಅಂಗಸಂಸ್ಥೆ ಬಜರಂಗ ದಳದ ನೇರ ಕೈವಾಡವಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಬಜರಂಗ ದಳದ ಪ್ರವೀಣ್ ಖಾಂಡ್ಯ ಸೇರಿದಂತೆ ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸೇರಿದಂತೆ ಎಲ್ಲ ವಿಚಾರಗಳ ಬಗ್ಗೆ ರಾಜ್ಯದ ಜನತೆಗೆ ಸತ್ಯಾಂಶ ತಿಳಿಸಲು ಎಲ್ಲ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಆಂದೋ ಲನ ರೂಪಿಸಲಾಗುವುದು ಎಂದು ತಿಳಿಸಿದರು.
ಬಿಜೆಪಿ ವೌನ: ಕಲ್ಲಪ್ಪ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಅಂಗಸಂಸ್ಥೆ ಕೈವಾಡವಿದ್ದರೂ, ಈ ಬಗ್ಗೆ ವೌನ ವಹಿಸಿರುವ ಬಿಜೆಪಿ ಮುಖಂಡರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ತಮ್ಮ ರಾಜಕೀಯ ಲಾಭಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಡಿವೈಎಸ್ಪಿ ಕಲ್ಲಪ್ಪ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಡಿ ತನಿಖೆ ಪ್ರಗತಿ ಯಲ್ಲಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈ ಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಹಗುರ ಹೇಳಿಕೆ ಸಲ್ಲ: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿ ಸಿದ್ದು, ವರದಿಯಲ್ಲಿ ತಪ್ಪಿತಸ್ಥರಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಡಿವೈಎಸ್ಪಿ ಅನುಪಮಾ ಶೆಣೈ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಯ್ಯಾರೂ ಅವರ ರಾಜೀನಾಮೆ ಕೇಳಿರಲಿಲ್ಲ. ಆದರೂ, ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುವ ಮೂಲಕ ಜನತೆಯನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ- ಜೆಡಿಎಸ್ ರಾಜಕಾರಣ ಮಾಡುವ ಮೂಲಕ ರಾಜ್ಯ ಸರಕಾರದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿವೆ, ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಅಕ್ರಮ ಗಣಿಗಾರಿಕೆ ಸೇರಿದಂತೆ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಿಲ್ಲ. ಆ ವೇಳೆ ಸಿಬಿಐಯನ್ನು ‘ಚೋರ್ ಬಚಾವೋ ಸಂಸ್ಥೆ, ಕಾಂಗ್ರೆಸ್ ಬ್ಯೂರೋ ಆಫ್ ಇನ್‌ವೆಸ್ಟಿಗೇಷನ್’ ಎಂದು ಬಿಜೆಪಿ ಮುಖಂಡರು ಟೀಕಿಸಿದ್ದರು. ಇದೀಗ ಅವರೇ ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವುದು ನಾಚಿಗೇಡಿನ ಸಂಗತಿ ಎಂದರು.





