ಬಾಲಕಾರ್ಮಿಕರ ಪತ್ತೆಗೆ ಡಿಸಿ ಡಾ. ರಿಚರ್ಡ್ ಸೂಚನೆ
ಜಿಲ್ಲಾ ಸಲಹಾ ಸಮಿತಿ ಸಭೆ

ಮಡಿಕೇರಿ, ಜು.20 : ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ಯೋಗಗಳಲ್ಲಿ ಬಳಸಿಕೊಳ್ಳುವುದು ಅಥವಾ ನೇಮಕ ಮಾಡಿಕೊಳ್ಳುವುದು ಅಪರಾಧವಾಗಿದೆ. ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಮತ್ತು ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಬಾಲಕಾರ್ಮಿಕ ಕಾಯ್ದೆ 1986ರ ಕಲಂ 17 ರಡಿ ನಿರೀಕ್ಷಕರಾಗಿ ನೇಮಕಗೊಂಡ ವಿವಿಧ ಇಲಾಖಾ ಅಧಿಕಾರಿಗಳನ್ನೊಳಗೊಂಡ ಜಂಟಿ ತಂಡ ಅನಿರೀಕ್ಷಿತ ದಾಳಿ ನಡೆಸಿ ಬಾಲಕಾರ್ಮಿಕ ಪ್ರಕರಣಗಳನ್ನು ದಾಖಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚಿಸಿದರು. ಜಿಲ್ಲೆಯಲ್ಲಿ ಕಟ್ಟಡ ಅಥವಾ ತೋಟದ ಕಾರ್ಮಿಕರಾಗಿ ದುಡಿಯುತ್ತಿರುವ ಬಾಲ ಕಾರ್ಮಿಕರು ಕಂಡುಬಂದಲ್ಲಿ ಕೂಡಲೇ ಸರ್ವೆ ಕಾರ್ಯವನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ವಿವಿಧ ಕೆಲಸಗಳಿಗೆ ವಾಹನಗಳಲ್ಲಿ ಬಾಲ ಕಾರ್ಮಿಕರನ್ನು ಕರೆದುಕೊಂಡು ಹೋಗುವ ಬಗ್ಗೆ ನಿಗಾವಹಿಸಿ ಕೂಡಲೇ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದರು.
ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್, ಬಾಲಕಾರ್ಮಿಕರ ಪದ್ದತಿ ಹೋಗಲಾಡಿಸುವ ನಿಟ್ಟಿನಲ್ಲಿ ಸಾರ್ವಜ ನಿಕರಿಗೆ ಜಾಗೃತಿ ಮೂಡಿಸುವ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಕ್ಕಳ ಸಹಾಯವಾಣಿಯನ್ನು ಸಮರ್ಪಕ ರೀತಿಯಲ್ಲಿ ಸಾರ್ವಜನಿಕರು ಬಳಸುವಂತೆ ಸಾರ್ವಜನಿಕರಿಗೆ ಮನವರಿಕೆ ಮಾಡುವ ಕೆಲಸವನ್ನು ಅಧಿಕಾರಿಗಳು ನಡೆಸಬೇಕೆಂು ಸೂಚಿಸಿದರು.
ಬಾಲ ಕಾರ್ಮಿಕರನ್ನು ಪತ್ತೆಹಚ್ಚುವುದರ ಜೊತೆಗೆ ಜೀತ ಪದ್ಧತಿ ನಿರ್ಮೂಲನೆ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸುವ ಕ್ರಮ ಆಗಬೇಕು. ಈ ಬಗ್ಗೆ ಇಲಾಖೆ ಅಧಿಕಾರಿಗಳ ಜೊತೆ ಸಂಘ ಸಂಸ್ಥೆಗಳು ನೆರವಾಗುವುದು ಅಗತ್ಯವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಕಾರ್ಮಿಕ ಅಧಿಕಾರಿ ಮಹದೇವ ಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಒ.ಆರ್. ಶ್ರೀರಂಗಪ್ಪ, ಜಿಲ್ಲಾ ಸರ್ಜನ್ ಡಾ. ಮುತ್ತಪ್ಪ, ಹಿರಿಯ ಕಾರ್ಮಿಕ ನಿರೀಕ್ಷಕ ಯತ್ನಿಟ್ಟ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧಿಕಾರಿ ಮಮ್ತಾಝ್, ಒಡಿಪಿ ಸಂಸ್ಥೆಯ ಜಾಯ್ಸೆ ಮೆನೆಜಸ್ ಮತ್ತಿತರರು ಉಪಸ್ಥಿತರಿದ್ದರು.







